ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ನಡೆಸುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಹೌರಾದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ.
ದೀದಿ ಸರ್ಕಾರದಲ್ಲಿನ ಭ್ರಷ್ಟಾಚಾರದ ವಿರುದ್ಧ ಇಂದು ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಹೌರಾದಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿದ್ದು, ಈ ವೇಳೆ ಪ್ರತಿಭಟನಾಕಾರರು ಟಿಎಂಸಿ ನಾಯಕರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಮೂರು ವಿವಿಧ ಧಿಕ್ಕುಗಳಿಂದ ಆಗಮಿಸಿದ ಪ್ರತಿಭಟನಾಕಾರರನ್ನು ರೈಲ್ವೆ ನಿಲ್ದಾಣ, ಹೌರಾ ಬ್ರಿಡ್ಜ್ ಬಳಿ ಬ್ಯಾರಿಕೇಡ್ ಗಳನ್ನು ಹಾಕಿ ಪೊಲೀಸರು ರ್ಯಾಲಿಯನ್ನು ತಡೆದಿದ್ದಾರೆ. ಈ ವೇಳೆ ಬಿಜೆಪಿ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಗಲಾಟೆ ಆರಂಭವಾಗಿದ್ದು, ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಅಶ್ರುವಾಯು ಪ್ರಯೋಗ, ಲಾಠಿ ಚಾರ್ಜ್ ಮಾಡಿದ್ದಾರೆ. ಪೊಲೀಸರ ಲಾಠಿ ಏಟಿಗೆ ಬಿಜೆಪಿ ಕಾರ್ಯಕರ್ತರು ಅಲ್ಲಲ್ಲಿಯೇ ಕುಸಿದು ಬಿದ್ದಿದ್ದಾರೆ. ಇದರಿಂದ ಪ್ರತಿಭಟನಾಕಾರರ ಆಕ್ರೋಶ ಮತ್ತಷ್ಟು ಹೆಚ್ಚಿದ್ದು ಪೊಲೀಸರ ಮೇಲೆ ಇನ್ನಷ್ಟು ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ ಪೊಲೀಸರು ಸುವೆಂದು ಅಧಿಕಾರಿ, ರಾಹುಲ್ ಸೇರಿದಂತೆ ಹಲವು ಬಿಜೆಪಿ ನಾಯಕರನ್ನು ವಶಕ್ಕೆ ಪಡೆದಿದ್ದಾರೆ.