ತುಮಕೂರು: ತುಮಕೂರು ಜಿಲ್ಲೆಯ ಪಾವಗಡ ಬಳಿ ನಡೆದಿದ್ದ ಖಾಸಗಿ ಬಸ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಗೊಂಡಿದ್ದ ಮತ್ತೋರ್ವ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ. ಈ ಮೂಲಕ ಬಸ್ ದುರಂತದಲ್ಲಿ ಸಾವನ್ನಪ್ಪಿದ ವಿದ್ಯಾರ್ಥಿಗಳ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.
17 ವರ್ಷದ ಮಹೇಂದ್ರ ಮೃತ ವಿದ್ಯಾರ್ಥಿ. ಬಸ್ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹೇಂದ್ರನನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಲೆ ಹಾಗೂ ಬೆನ್ನು ಮೂಳೆಗೆ ಗಂಭೀರವಾಗಿ ಗಾಯಗೊಂಡಿದ್ದ ಬಾಲಕನ ಚಿಕಿತ್ಸೆಗೆ ನಿಮ್ಹಾನ್ಸ್ ನಲ್ಲಿ ಬೆಡ್ ವ್ಯವಸ್ಥೆ ಸಿಗದೇ ಕುಟುಂಬ ಪರದಾಡಿತ್ತು. ಬಳಿಕ ವಿಕ್ಟೋರಿಯಾ ಆಸ್ಪತ್ರೆಗೆ ಬಾಲಕನನ್ನು ದಾಖಲಿಸಲಾಗಿತ್ತು. ಆದರೆ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾನೆ.
ಆಳ ಸಮುದ್ರದಲ್ಲಿ ವ್ಯಕ್ತಿಯೊಬ್ಬರ ಮೇಲೆ ಕತ್ತಿ ಮೀನು ಅಟ್ಯಾಕ್: ಭಯಾನಕ ವಿಡಿಯೋ ವೈರಲ್
ಮಾರ್ಚ್ 19ರಂದು ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಬಳಿ ಖಾಸಗಿ ಬಸ್ ಪಲ್ಟಿಯಾಗಿ ಸ್ಥಳದಲ್ಲೇ ಐವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದರೆ, ಓರ್ವ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಅಸುನೀಗಿದ್ದರು. ಇದೀಗ ಮತ್ತೋರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.