ಬೆಂಗಳೂರು: ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ರಾಜ್ಯಾದ್ಯಂತ ತಾರಕಕ್ಕೇರಿರುವ ನಡುವೆಯೇ ದ್ವಿತೀಯ ಪಿಯು ಪಠ್ಯ ಪರಿಷ್ಕರಣೆಗೂ ರಾಜ್ಯ ಸರ್ಕಾರ ಮುಂದಾಗಿದೆ.
ರೋಹಿತ್ ಚಕ್ರತೀರ್ಥ ವಿರುದ್ಧ ಸಾಲು ಸಾಲು ಆರೋಪಗಳು ಕೇಳಿಬರುತ್ತಿರುವ ಬೆನ್ನಲ್ಲೇ ಇದಿಗ ಶಿಕ್ಷಣ ಇಲಾಖೆ ದ್ವಿತೀಯ ಪಿಯು ಪಠ್ಯ ಪರಿಷ್ಕರಣೆ ಸಮಿತಿಯಿಂದ ರೋಹಿತ್ ಅವರನ್ನು ಕೈಬಿಟ್ಟಿದೆ.
ಪಿಯು ಪಠ್ಯ ಪುಸ್ತಕ ಪರಿಷ್ಕರಣೆಯಿಂದ ರೋಹಿತ್ ಚಕ್ರತೀರ್ಥ ಅವರನ್ನು ಹೊರಗಿಡಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
ದ್ವಿತೀಯ ಪಿಯುಸಿ ಅಧ್ಯಾಯ 4.2 ರ ಹೊಸ ಧರ್ಮಗಳ ಉದಯ ಪಠ್ಯಭಾಗದ ಪರಿಷ್ಕರಣೆಗೆ ಸರ್ಕಾರ ಮುಂದಾಗಿದ್ದು, ಈ ಜವಾಬ್ದಾರಿಯನ್ನು ರೋಹಿತ್ ಚಕ್ರತೀರ್ಥ ಅವರಿಗೆ ವಹಿಸಿತ್ತು.
ಇದೀಗ ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆ ವಿವಾದದಲ್ಲಿ ರೋಹಿತ್ ಚಕ್ರತೀರ್ಥ ವಿರುದ್ಧ ವಿವಾದ ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಅವರನ್ನು ಸಮಿತಿಯಿಂದ ಕೈಬಿಡಲು ಶಿಕ್ಷಣ ಇಲಾಖೆ ತೀರ್ಮಾನಿಸಿದೆ.