ಬೆಂಗಳೂರು: ಪವರ್ ಸ್ಟಾರ್ ದಿ.ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಗಳ ಮೇಲೆ ಅದ್ಧೂರಿ ಕಾರ್ಯಕ್ರಮ ಆರಂಭವಾಗಿದೆ.
ರಾಜ್ಯ ಸರ್ಕಾರದ ವತಿಯಿಂದ ಸಿಎಂ ಬಸವರಾಜ್ ಬೊಮ್ಮಾಯಿ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಿದ್ದು, ಪುನೀತ್ ಪತ್ನಿ ಅಶ್ವಿನಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ವಿಧಾನಸೌಧದ ಮೆಟ್ಟಿಲುಗಳ ಮೇಲೆ ಹಂಪಿ ಮಾದರಿಯಲ್ಲಿ ವೇದಿಕೆ ನಿರ್ಮಾಣ ಮಾಡಲಾಗಿದ್ದು, ಖ್ಯಾತ ಗಾಯಕ ವಿಜಯ್ ಪ್ರಕಾಶ್ ಹಾಗೂ ತಂಡದಿಂದ ಅಪ್ಪು ಸಿನಿಮಾಗಳ ಜನಪ್ರಿಯ ಹಾಡುಗಳ ಗೀತ ಗಾಯನ ನಡೆಯುತ್ತಿದೆ.
ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗಿಯಾಗಲು ಈಗಾಗಲೇ ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ತೆಲುಗು ನಟ ಜ್ಯೂ.ಎನ್ ಟಿ ಆರ್ ಬೆಂಗಳೂರಿಗೆ ಆಗಮಿಸಿದ್ದು, ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ. ಇನ್ನು ವಿಧಾನಸೌಧಕ್ಕೆ ಆಗಮಿಸಲು ಡಾ. ರಾಜ್ ಕುಟುಂಬ ಸದಸ್ಯರಿಗಾಗಿ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದ್ದು, ಎರಡು ಬಸ್ ಗಳ ಮೂಲಕವಾಗಿ ರಾಜ್ ಕುಟುಂಬ ಸದಸ್ಯರನ್ನು ವಿಧನಸೌಧಕ್ಕೆ ಕರೆತರಲಾಗಿದೆ. ವಿಧಾನಸೌಧದ ಮುಂಭಾಗದಲ್ಲಿ ಸಾಗರೋಪಾದಿಯಲ್ಲಿ ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ನೆರೆದಿದ್ದು, ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.