ಬೆಂಗಳೂರು: ನಸುಕಿನಲ್ಲಿ ಸುಪ್ರಭಾತ & ಅಲ್ಲಾಹ್ ಕೂಗುವ ಪರಿಪಾಠ ಇಂದು-ನಿನ್ನೆಯದಲ್ಲ. ಅನಾದಿ ಕಾಲದಿಂದಲೂ, ಧರ್ಮಗಳು ಹುಟ್ಟಿದಾಗಿನಿಂದಲೂ ನಡೆದುಕೊಂಡೇ ಬಂದಿವೆ ಇದರಲ್ಲಿ ಆಕ್ಷೇಪಗಳು ಯಾಕೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಹಿಂದುಗಳಾದ ನಾವು ನಮ್ಮ ದೇವರಿಗೆ ಭಕ್ತಿಯಿಂದ ಸಲ್ಲಿಸುವ ಸೇವೆಗಳಿಗೆ ಮುಸ್ಲೀಮರು ಸೇರಿ ಅನ್ಯ ಧರ್ಮದ ಯಾರಿಂದಲೂ ಆಕ್ಷೇಪ ಇಲ್ಲದಿರುವಾಗ ಮಸೀದಿಗಳ ಧ್ವನಿವರ್ಧಕಗಳ ಬಗ್ಗೆ ತಕರಾರು ತೆಗೆಯುವುದು ಏಕೆ? ಅಗತ್ಯಬಿದ್ದರೆ, ಶಬ್ದದ ಪ್ರಮಾಣವನ್ನು ವೈಜ್ಞಾನಿಕವಾಗಿ ಚಿಂತಿಸಿ ಕಡಿಮೆ ಮಾಡಲಿ. ಆ ಬಗ್ಗೆ ಮುಸ್ಲಿಂ ಧರ್ಮಗುರುಗಳೂ ಆಲೋಚನೆ ಮಾಡಲಿ ಎಂದು ಕುಮಾರಸ್ವಾಮಿ ಸರಣಿ ಟ್ವೀಟ್ ಮೂಲಕ ಹೇಳಿದ್ದಾರೆ.
ಭಾರತೀಯ ಸಂವಿಧಾನವು ಜಗತ್ತಿನ ಸರ್ವಶ್ರೇಷ್ಠ ಸಂವಿಧಾನ. ಅದರಲ್ಲಿ ಅಡಕವಾಗಿರುವ ಸಹಿಷ್ಣುತೆಯ ಆಶಯಕ್ಕೆ ಧಕ್ಕೆ ತರುವುದು ಬೇಡ. ಸಂಸತ್ತಿನಲ್ಲಿರುವ ಸಂವಿಧಾನ ಪ್ರತಿಗೆ ಶಿರಬಾಗಿ ನಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರ ಆಶಯವನ್ನು ಹಿಂದೂ ಸಂಘಟನೆಗಳು ಅರ್ಥ ಮಾಡಿಕೊಳ್ಳಬೇಕು. ಬಿಜೆಪಿ ನಾಯಕರು ಮೋದಿ ಅವರ ಮೇಲ್ಪಂಕ್ತಿಯನ್ನು ಗೌರವಿಸಬೇಕು.
ದೇವಾಲಯಗಳಲ್ಲಿ ನಡೆಯುತ್ತಿದ್ದ ನಿತ್ಯ ಭಜನೆ, ಸುಪ್ರಭಾತ ವೇಳೆ ಕೇಳಿಬರುತ್ತಿದ್ದ ಶ್ಲೋಕ, ಕೀರ್ತನೆ, ಭಜನೆಗಳು ಕ್ರಮೇಣ ಕಣ್ಮರೆಯಾಗಿವೆ. ನಾವೆಲ್ಲರೂ ಸೇರಿ ಅವುಗಳ ಪುನರುದ್ಧಾರ ಮಾಡೋಣ. ಮಕ್ಕಳಲ್ಲಿ ಸಾತ್ವಿಕ ಸಂಸ್ಕಾರವನ್ನು ಬೆಳೆಸೋಣ. ಅದರ ಹೊರತಾಗಿ ಇನ್ನೊಂದು ಧರ್ಮದ ನಂಬಿಕೆಗಳ ಮೇಲೆ ದಾಳಿ ಮಾಡುವುದನ್ನು ನಿಲ್ಲಿಸೋಣ ಎಂದು ಕರೆ ನೀಡಿದ್ದಾರೆ.