
ಬೆಂಗಳೂರು: ರೈತರ ಆಕ್ರೋಶಕ್ಕೆ ಗುರಿಯಾಗಿದ್ದ 3 ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಪ್ರಧಾನಿ ಮೋದಿ ಘೋಷಣೆ ಮಾಡಿರುವುದು ಸ್ವಾಗತಾರ್ಹ. ಕೊನೆಗೂ ಕೇಂದ್ರ ಸರ್ಕಾರಕ್ಕೆ ಜ್ಞಾನೋದಯ ಆಗಿರುವುದು ಉತ್ತಮ ಬೆಳವಣಿಗೆ. ರೈತರ ಜತೆ ಚರ್ಚೆ ನಡೆಸದೇ ಈ ಕಾಯ್ದೆಗಳ ಏಕಪಕ್ಷೀಯ ಜಾರಿ ಮತ್ತು ಈಗ ಏಕಾಏಕಿ ರದ್ದತಿ ಅನೇಕ ಪ್ರಶ್ನೆ ಹುಟ್ಟುಹಾಕಿದೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ನಿಜಕ್ಕೂ ಕರಾಳ ಕಾಯ್ದೆಗಳ ವಾಪಸಾತಿ ರೈತರ ವಿಜಯ ಮತ್ತು ಐತಿಹಾಸಿಕ. ಒಂದು ವರ್ಷಕ್ಕೂ ಹೆಚ್ಚು ಕಾಲ ದೆಹಲಿಯ ಗಡಿಯಲ್ಲಿ ಅನ್ನದಾತರು ಪ್ರತಿಭಟನೆ ನಡೆಸಿದರು. ಕೇಂದ್ರವು ಅವರ ಮೇಲೆ ಅಮಾನವೀಯ ಕ್ರೌರ್ಯ ನಡೆಸಿತು. ಅನೇಕ ಅಮೂಲ್ಯ ಜೀವಗಳ ನೆತ್ತರು ಹರಿಯಿತು. ಚಳಿ, ಮಳೆ, ಬಿಸಿಲೆನ್ನದೇ ರೈತರು ಹೋರಾಡಿದರು ಎಂದು ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡಿದ್ದಾರೆ.
ಯಮುನಾ ದಂಡೆಯಲ್ಲಿ ಸಾವಿರಾರು ಮೀನುಗಳ ಮಾರಣಹೋಮ
ಐದು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ಇದೆ. ಕೇಂದ್ರದ ನಿರ್ಧಾರ ಪ್ರಾಮಾಣಿಕವಾಗಿರಲಿ. ಕೇವಲ ಮತ ಫಸಲಿಗೆ ಮಾಡಿದ ಹೈಡ್ರಾಮಾ ಆಗದಿರಲಿ. ಚುನಾವಣೆ ಮುಗಿದ ಮೇಲೆ ಆ ಕರಾಳ ಕಾಯ್ದೆಗಳನ್ನು ಬೇರೆ ರೂಪದಲ್ಲಿ ಪುನಃ ಜಾರಿ ಮಾಡುವುದಿಲ್ಲ ಎಂದು ಪ್ರಧಾನಿಗಳು ತಮ್ಮ ಭಾಷಣದಲ್ಲಿ ರೈತರಿಗೆ ಮಾತು ಕೊಡಬೇಕಿತ್ತು ಎಂದು ಆಗ್ರಹಿಸಿದ್ದಾರೆ.
ದೆಹಲಿ, ಉತ್ತರಪ್ರದೇಶ, ಹರಿಯಾಣ, ಪಂಜಾಬ್ ಸೇರಿದಂತೆ ದೇಶದ ನಾನಾ ಕಡೆ ರೈತರ ವಿರುದ್ಧ ನಡೆದಿರುವ ದೌರ್ಜನ್ಯಕ್ಕೆ ಪ್ರಧಾನಿಗಳು ತಮ್ಮ ಭಾಷಣದಲ್ಲಿ ಕ್ಷಮೆ ಯಾಚನೆ ಮಾಡಬೇಕಿತ್ತು. ಈಗಲಾದರೂ ರೈತರ ಮೇಲೆ ಹಿಂಸಾಚಾರ ನಡೆಸಿದವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.