ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, 4 ನೇ ಬಾರಿ ಸಿಎಂ ಆಗಿ ಪೂರ್ಣಾವಧಿ ಅಧಿಕಾರ ಪೂರೈಸುವ ಮೊದಲೇ ಪದತ್ಯಾಗ ಮಾಡಿದ್ದು, ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ದಿನವೇ ಯಡಿಯೂರಪ್ಪ ಅಧಿಕಾರದಿಂದ ಕೆಳಗಿಳಿದಿರುವುದು ಅಚ್ಚರಿಗೆ ಕಾರಣವಾಗಿದೆ.
ಇಂದು ರಾಜ್ಯ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷ ಪೂರೈಸಿದ್ದು, ಸಾಧನಾ ಸಮಾವೇಶ ಕಾರ್ಯಕ್ರಮದಲ್ಲಿ ಭಾವುಕರಾಗಿ ಮಾತನಾಡಿದ ಸಿಎಂ ಯಡಿಯೂರಪ್ಪ, ರಾಜೀನಾಮೆ ಘೋಷಿಸಿದರು. ಬಳಿಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಅಧಿಕೃತವಾಗಿ ರಾಜೀನಾಮೆ ಪತ್ರ ಸಲ್ಲಿಸಿದರು.
ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ದಿನದಂದೇ ಸಿಎಂ ಯಡಿಯೂರಪ್ಪ ಪದತ್ಯಾಗ ಮಾಡಿದ್ದಾರೆ. ಜುಲೈ 26, 2019ರಂದು ಸಂಜೆ 6 ಗಂಟೆಗೆ ಬಿ.ಎಸ್.ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಅಂದು ರಾಜ್ಯಪಾಲರಾಗಿ ವಾಜುಭಾಯಿ ವಾಲ ಇದ್ದರು. ಇಂದು ಜುಲೈ 26ರಂದೇ ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡಿರುವುದು ಅಚ್ಚರಿಗೆ ಕಾರಣವಾಗಿದೆ.