ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಇಂದು ಮಧ್ಯಾಹ್ನ 12:30 ಕ್ಕೆ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸುತ್ತಿದ್ದು, ಇದಾದ ಬಳಿಕ ನಡೆಯುವ ಮೊದಲ ಕ್ಯಾಬಿನೆಟ್ ಮೀಟಿಂಗ್ ನಲ್ಲಿಯೇ ಮಹತ್ವದ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.
ಅದರಲ್ಲೂ ಚುನಾವಣೆ ಸಂದರ್ಭದಲ್ಲಿ ನೀಡಿರುವ ಕಾಂಗ್ರೆಸ್ ಗ್ಯಾರಂಟಿಗಳಾದ ಉಚಿತ ವಿದ್ಯುತ್ ಯೋಜನೆ, ಬಸ್ ನಲ್ಲಿ ಉಚಿತ ಪ್ರಯಾಣ ಹಾಗೂ ಗೃಹಿಣಿಯರಿಗೆ ಹಣ ನೀಡುವ ಯೋಜನೆಯನ್ನು ಇಂದೇ ಘೋಷಣೆ ಮಾಡುವ ಸಾಧ್ಯತೆಯಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಹ ಮಾಧ್ಯಮಗಳ ಮುಂದೆ ಈ ಮಾತುಗಳನ್ನು ಹೇಳಿದ್ದಾರೆ.
ಈ ಹಿನ್ನಲೆಯಲ್ಲಿ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಣಕಾಸು ಇಲಾಖೆಯ ಹಿರಿಯ ಅಧಿಕಾರಿಗಳನ್ನು ತಮ್ಮ ನಿವಾಸಕ್ಕೆ ಕರೆಯಿಸಿಕೊಂಡು ಮಹತ್ವದ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಈ ಸಭೆಯಲ್ಲಿ ಹಣಕಾಸು ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಐಎನ್ಎಸ್ ಪ್ರಸಾದ್, ಕಾರ್ಯದರ್ಶಿಗಳಾದ ಜಾಫರ್, ರೂಪ್ ಕೌರ್ ಮೊದಲಾದವರು ಪಾಲ್ಗೊಂಡಿದ್ದರು ಎಂದು ಮೂಲಗಳು ಹೇಳಿವೆ.