ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಪ್ರವಾಹದ ಅಬ್ಬರಕ್ಕೆ ಗುಳ್ಳಾಪುರ ಸೇತುವೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದು ಯಲ್ಲಾಪುರ ಹಾಗೂ ಅಂಕೋಲಾ ತಾಲೂಕುಗಳ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ.
ಧಾರಾಕಾರ ಮಳೆಯಿಂದಾಗಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಗುಳ್ಳಾಪುರ ಸೇತುವೆಯ ಮಧ್ಯ ಭಾಗವೇ ನೀರಿನಲ್ಲಿ ತುಂಡಾಗಿ ಬಿದ್ದು ಕೊಚ್ಚಿಕೊಂಡು ಹೋಗಿದೆ. 15 ಗ್ರಾಮಗಳ ಸಂಪರ್ಕ ಕಡಿತಗೊಂಡಿದ್ದು, ನಡುಗಡ್ಡೆಗಳಂತಾಗಿವೆ.
ಆಹಾರ, ವಸತಿ, ಸಂಪರ್ಕ ಸೌಲಭ್ಯವೂ ಇಲ್ಲದೇ ಗ್ರಾಮಸ್ಥರು ಕಂಗಾಲಾಗಿದ್ದು, ಸೇತುವೆ ಬಳಿ ಬಂದು ರಕ್ಷಣೆಗಾಗಿ ಮೊರೆ ಇಡುತ್ತಿದ್ದಾರೆ. ವಾರದಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಪ್ರವಾಹ ಪರಿಸ್ಥಿತಿ ಉಂಟಾದರೂ ಯಾವೊಬ್ಬ ಜನಪ್ರತಿನಿಧಿಗಳಾಗಲಿ, ಅಧಿಕಾರಿಗಳಾಗಲಿ ಇತ್ತ ಸುಳಿಯುತ್ತಲೂ ಇಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.