ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆ ಪ್ರಕರಣದ ಬೆನ್ನಲ್ಲೇ ಬಿಜೆಪಿ ನಾಯಕರು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ನೆಟ್ಟಾರು ನಿವಾಸಕ್ಕೆ ಭೇಟಿ ನೀಡಿ, ಪ್ರವೀಣ್ ಕುಟುಂಬಕ್ಕೆ ಸಾಂತ್ವನ ಹೇಳುತ್ತಿದ್ದಾರೆ.
ಇದೀಗ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ, ಸಂಸದ ತೇಜಸ್ವಿ ಸೂರ್ಯ ಮೃತ ಪ್ರವೀಣ್ ನೆಟ್ಟಾರು ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ತೇಜಸ್ವಿ ಸೂರ್ಯ, ಪ್ರವೀಣ್ ನೆಟ್ಟಾರು ಸಾವು ನಮ್ಮ ಪಕ್ಷಕ್ಕೆ ತುಂಬಲಾರದ ನಷ್ಟ. ಅವರು ಈ ಭಾಗದಲ್ಲಿ ಬೆಳೆಯುತ್ತಿದ್ದ ನಾಯಕ. ಯುವ ಮೋರ್ಚಾ ವತಿಯಿಂದ ಮೃತರ ಕುಟುಂಬಕ್ಕೆ 15 ಲಕ್ಷ ಪರಿಹಾರ ನೀಡಲಾಗುವುದು. ಈಗಾಗಲೇ ಸಿಎಂ ಪರಿಹಾರ ನಿಧಿಯಿಂದ 25 ಲಕ್ಷ ನೀಡಲಾಗಿದ್ದು, ಮನೆಯನ್ನು ಕಟ್ಟಿಸಿಕೊಡಲಾಗುವುದು ಎಂದು ಹೇಳಿದರು.
ಪ್ರವೀಣ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಮಗನೇ ಈ ಕೃತ್ಯದಲ್ಲಿ ಭಾಗಿಯಾಗಿರುವುದು ದುಃಖದ ಸಂಗತಿ. ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಮನವಿ ಮಾಡುತ್ತೇನೆ ಎಂದಿದ್ದಾರೆ.