ಕಳೆದ ರಾತ್ರಿ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆಯ ಮೇಲಿನಪೇಟೆಯಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದು, ಕೇಂದ್ರ ಗೃಹ ಸಚಿವೆ ಶೋಭಾ ಕರಂದ್ಲಾಜೆ ಈ ಹತ್ಯೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.
ನವದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರವೀಣ್ ನೆಟ್ಟಾರು ಹತ್ಯೆ ಪೂರ್ವ ನಿಯೋಜಿತ ಕೃತ್ಯವಾಗಿದೆ. ಹಿಂದೂ ಕಾರ್ಯಕರ್ತರಲ್ಲಿ ಭಯ ಹುಟ್ಟಿಸಲು ಈ ಕೊಲೆ ಮಾಡಲಾಗಿದೆ ಎಂದು ನೇರವಾಗಿ ಆರಂಭಿಸಿದ್ದಾರೆ.
ಕಳೆದ ವಾರ ನಡೆದ ಮಸೂದ್ ಕೊಲೆಗೂ ಹಾಗೂ ಪ್ರವೀಣ್ ನೆಟ್ಟಾರೆಯವರಿಗೂ ಯಾವುದೇ ಸಂಬಂಧವಿರಲಿಲ್ಲ. ಪ್ರವೀಣ್, ಬಿಜೆಪಿ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿದ್ದರು. ಅಲ್ಲದೆ ಜನಸಾಮಾನ್ಯರ ಕೆಲಸ ಕಾರ್ಯಗಳಿಗೆ ಸ್ಪಂದಿಸುತ್ತಿದ್ದರು ಎಂದು ಶೋಭಾ ಕರಂದ್ಲಾಜೆ ಹೇಳಿದರು.
ಪ್ರವೀಣ್ ನೆಟ್ಟಾರೆಯವರ ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ಒಪ್ಪಿಸಬೇಕು ಎಂದ ಹೇಳಿದ ಶೋಭಾ ಕರಂದ್ಲಾಜೆ, ಸಾಧ್ಯವಾದರೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ತಾವು ಈ ಕುರಿತು ಮಾತುಕತೆ ನಡೆಸುವುದಾಗಿ ತಿಳಿಸಿದರು.