ಬೆಂಗಳೂರು: ಬಿಎಂಎಸ್ ಟ್ರಸ್ಟ್ ನಲ್ಲಿ ನಡೆದಿರುವ ಅಕ್ರಮದ ಬಗ್ಗೆ ತನಿಖೆಗೆ ಆಗ್ರಹಿಸಿ ಹಾಗೂ ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ರಾಜೀನಾಮೆಗೆ ಆಗ್ರಹಿಸಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಜೆಡಿಎಸ್ ಸದಸ್ಯರು ಸದನದಲ್ಲಿ ಪಟ್ಟು ಹಿಡಿಯುತ್ತಿದ್ದಂತೆ ರಾಜ್ಯ ಸರ್ಕಾರ ವಿಪಕ್ಷ ಜೊತೆ ಸಂಧಾನಕ್ಕೆ ಮುಂದಾಗಿದ್ದು, ಆದರೆ ಸಂಧಾನ ಸಭೆ ವಿಫಲವಾಗಿದೆ ಎಂದು ತಿಳಿದುಬಂದಿದೆ.
ವಿಧಾನಸಭಾ ಕಲಾಪ ಆರಂಭವಾಗುತ್ತಿದ್ದಂತೆ ಬಿಎಂಎಸ್ ಅಕ್ರಮದ ಬಗ್ಗೆ ದಾಖಲೆ ಮುಂದಿಟ್ಟು ಜೆಡಿಎಸ್ ಸದಸ್ಯರು ಸಿಬಿಐ ತನಿಖೆಗೆ ಆಗ್ರಹಿಸಿ ಸದನದಲ್ಲಿ ಪ್ರತಿಭಟನೆ ಆರಂಭಿಸಿದರು. ಸದನದಲ್ಲಿ ಗದ್ದಲ ಹೆಚ್ಚುತ್ತಿದ್ದಂತೆ ಕೆಲಕಾಲ ಕಲಾಪವನ್ನು ಮುಂದೂಡಲಾಯಿತು. ಈ ವೇಳೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ನೇತೃತ್ವದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ, ಸಚಿವ ಅಶ್ವತ್ಥನಾರಾಯಣ ಸೇರಿದಂತೆ ಆಡಳಿತ ಪಕ್ಷದ ಸದಸ್ಯರು, ವಿಪಕ್ಷ ನಾಯಕ ಸಿದ್ದರಾಮಯ್ಯ, ಕಾಂಗ್ರೆಸ್ ಸದಸ್ಯರು ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ರೇವಣ್ಣ ಸೇರಿದಂತೆ ಜೆಡಿಎಸ್ ಸದಸ್ಯರೊಂದಿಗೆ ಸಂಧಾನ ಸಭೆ ನಡೆಯಿತು.
ಸಭೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಬಿಎಂಎಸ್ ಅಕ್ರಮ ತನಿಖೆಯನ್ನು ಸರ್ಕಾರ ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹಿಸಿದರು. ತನಿಖೆಗೆ ಸರ್ಕಾರ ಒಪ್ಪದ ಹಿನ್ನೆಲೆಯಲ್ಲಿ ಸ್ಪೀಕರ್ ನೇತೃತ್ವದಲ್ಲಿ ನಡೆದ ಸಂಧಾನ ಸಭೆ ವಿಫಲವಾಗಿದ್ದು, ಸದನದಲ್ಲಿ ಧರಣಿ ಮುಂದುವರೆಸಲು ಜೆಡಿಎಸ್ ಸದಸ್ಯರು ನಿರ್ಧರಿಸಿದ್ದಾರೆ.