ಬೆಂಗಳೂರು: ಬಿಎಂಎಸ್ ಕಾಲೇಜು ಟ್ರಸ್ಟ್, ಜಮೀನು ಅಕ್ರಮ ವಿಚಾರ ಇಂದು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ್ದು, ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ ರಾಜೀನಾಮೆಗೆ ಆಗ್ರಹಿಸಿ ಜೆಡಿಎಸ್ ಸದಸ್ಯರು ಪಟ್ಟು ಹಿಡಿದ್ದಾರೆ.
ವಿಧಾನಸಭೆ ಕಲಾಪ ಆರಂಭವಾಗುತ್ತಿದಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಬಿಎಂಎಸ್ ಟ್ರಸ್ಟ್ ನಲ್ಲಿ ಸಾಕಷ್ಟು ಅಕ್ರಮ ನಡೆದಿದೆ. ಸಾವಿರಾರು ಕೋಟಿ ಆಸ್ತಿ ಲಪಟಾಯಿಸಲು ಹುನ್ನಾರ ನಡೆದಿದೆ. ಸಚಿವ ಅಶ್ವತ್ಥನಾರಾಯಣ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದರು.
ಮಾಜಿ ಸಿಎಂ ಹೇಳಿಕೆಗೆ ಜೆಡಿಎಸ್ ಇತರ ಸದಸ್ಯರು ಧ್ವನಿಗೂಡಿಸಿದ್ದು, ಬಿಎಂಎಸ್ ಟ್ರಸ್ಟ್, ಜಮೀನು ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆಗೆ ಆಗ್ರಹಿಸಿ ಸದನದಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಆಡಳಿತ ಪಕ್ಷ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರ ನಡುವೆ ವಾಗ್ವಾದ ನಡೆದಿದ್ದು ಗದ್ದಲ ಕೋಲಾಹಲ ಆರಂಭವಾದ ಹಿನ್ನೆಲೆಯಲ್ಲಿ ಕಲಾಪವನ್ನು 10 ನಿಮಿಷಗಳ ಕಾಲ ಮುಂದೂಡಲಾಗಿದೆ.