ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿದ್ದು, ಮೂರು ಪಕ್ಷಗಳ ನಾಯಕರು ಈಗಾಗಲೇ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದ್ದು, ಬಿಜೆಪಿ ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದೆ.
ನೆಲಮಂಗಲ ಹೊರವಲಯದ ರೆಸಾರ್ಟ್ ನಲ್ಲಿ ಇಂದು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯುತ್ತಿದ್ದು, ಬೆಳಗಾವಿ, ತುಮಕೂರು, ಧಾರವಾಡ ಹಾಗೂ ಬಳ್ಳಾರಿ ವಿಭಾಗೀಯ ಜಿಲ್ಲೆಗಳ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಇದರಲ್ಲಿ ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದ ಟಿಕೆಟ್ ಹಂಚಿಕೆ ಬಿಜೆಪಿ ನಾಯಕರಿಗೆ ಕಗ್ಗಂಟಾಗಿ ಪರಿಣಮಿಸಿದೆ ಎಂದು ಹೇಳಲಾಗಿದೆ.
ಅಥಣಿ ಕ್ಷೇತ್ರದ ಬಿಜೆಪಿ ಟಿಕೆಟ್ ಅನ್ನು ತಮ್ಮ ಕಟ್ಟಾ ಬೆಂಬಲಿಗ ಮಹೇಶ್ ಕುಮಟಳ್ಳಿ ಅವರಿಗೆ ಕೊಡಿಸಲು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರಯತ್ನ ನಡೆಸಿದ್ದು, ಒಂದು ವೇಳೆ ಮಹೇಶ್ ಕುಮಟಳ್ಳಿ ಅವರಿಗೆ ಟಿಕೆಟ್ ನೀಡದಿದ್ದರೆ ತಾವು ಕೂಡ ಗೋಕಾಕ್ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ. ಅತ್ತ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಕೂಡ ಈ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದು, ತಮ್ಮನ್ನೇ ಪರಿಗಣಿಸುವಂತೆ ನಾಯಕರ ಮೇಲೆ ಒತ್ತಡ ಹೇರುತ್ತಿದ್ದಾರೆ.
ಅಲ್ಲದೆ ಉಭಯ ಬಣಗಳ ಮುಖಂಡರು ಹಾಗೂ ಕಾರ್ಯಕರ್ತರು ಪರಸ್ಪರರ ವಿರುದ್ಧ ಆರೋಪಗಳನ್ನು ಮಾಡುತ್ತಿದ್ದು, ಇದು ಚುನಾವಣಾ ಫಲಿತಾಂಶದ ಮೇಲೆ ಪರಿಣಾಮ ಬೀರಬಹುದು ಎಂಬ ಆತಂಕ ಬಿಜೆಪಿ ನಾಯಕರನ್ನು ಕಾಡುತ್ತಿದೆ. ಹೀಗಾಗಿ ಇನ್ನು ಮುಂದೆ ಬಣ ರಾಜಕೀಯ ಮಾಡಬಾರದು ಹಾಗೂ ಯಾರಿಗೇ ಟಿಕೆಟ್ ನೀಡಿದರು ಅವರ ಪರವಾಗಿ ಕೆಲಸ ಮಾಡುವಂತೆ ಇಂದಿನ ಸಭೆಯಲ್ಲಿ ಖಡಕ್ ಸೂಚನೆ ರವಾನೆಯಾಗುವ ಸಾಧ್ಯತೆ ಇದೆ.