ವಿಜಯಪುರ; ವಿಧಾನಸಭಾ ಚುನಾವಣೆಗೆ ಹತ್ತು ದಿನಗಳು ಮಾತ್ರ ಬಾಕಿಯಿದ್ದು, ರಾಜಕೀಯ ಅಖಾಡ ಕ್ಷಣ ಕ್ಷಣಕ್ಕೂ ಕುತೂಹಲಕ್ಕೆ ಕಾರಣವಾಗಿದೆ. ಮಹತ್ವದ ಬೆಳವಣಿಗೆಯೊಂದರಲ್ಲಿ ವಿಜಯಪುರ ನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಚುನಾವಣಾ ಕಣದಿದ ಹಿಂದೆ ಸರಿದು ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ಘೋಷಣೆ ಮಾಡಿದ್ದಾರೆ. ಇದು ಬಿಜೆಪಿ ಅಭ್ಯರ್ಥಿ ಬಸವನಗೌಡ ಪಾಟೀಲ್ ಯತ್ನಾಳ್ ಗೆ ಶಾಕ್ ನಿಡಿದೆ.
ವಿಜಯಪುರ ನಗರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಶಾಸಕ ಯತ್ನಾಳ್, ಈ ಬಾರಿ ಗೆಲುವು ತಮ್ಮದೇ ಎಂಬ ಲೆಕ್ಕಾಚಾರದಲ್ಲಿದ್ದರು. ಕಾರಣ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಈ ಕ್ಷೇತ್ರದಲ್ಲಿ ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದವು. ಅಸಲಿಗೆ ಈ ಕ್ಷೇತ್ರದಲ್ಲಿ ಮುಸ್ಲಿಂ ಬಾಹುಳ್ಯವಿರುವುದರಿಂದ ಎರಡೂ ಪಕ್ಷಗಳು ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್ ಘೋಷಿಸಿದ್ದವು.
ಹಾಗಾಗಿ ಕಾಂಗ್ರೆಸ್ ಜೆಡಿಎಸ್ ಪಕ್ಷಗಳ ನಡುವೆ ಮತ ಹಂಚಿಕೆಯಾಗಿ ತಮ್ಮ ಗೆಲುವಿಗೆ ಸಹಕಾರಿಯಾಗಲಿದೆ ಎಂಬುದು ಯತ್ನಾಳ್ ಆಲೋಚನೆಯಾಗಿತ್ತು ಎನ್ನಲಾಗಿದೆ. ಆದರೆ ಈಗ ಕೊನೆ ಕ್ಷಣದಲ್ಲಿ ಜೆಡಿಎಸ್ ಅಭ್ಯರ್ಥಿ ಬಂದೇನವಾಜ್ ಮಹಾಬರಿ ಕಾಂಗ್ರೆಸ್ ಅಭ್ಯರ್ಥಿ ಅಬ್ದುಲ್ ಹಮೀದ್ ಮುಶ್ರೀಫ್ ಗೆ ಬೆಂಬಲ ಘೋಷಿಸಿದ್ದಾರೆ
ಈ ಬಗ್ಗೆ ಸ್ಪಷ ಪಡಿಸಿರುವ ಜೆಡಿಎಸ್ ಅಭ್ಯರ್ಥಿ ಬಂದೇನವಾಜ್, ವಿಜಯಪುರ ನಗರ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷಕ್ಕೆ ಸಂಘಟನೆ ಇಲ್ಲ, ಕಾರ್ಯಕರ್ತರ ಪಡೆಯೂ ಇಲ್ಲ. ಎರಡು ದಿನ ಪ್ರಚಾರ ನಡೆಸಿದಾಗ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿಲ್ಲ. ಹೀಗಾಗಿ ಕಣದಿಂದ ಹಿಂದೆ ಸರಿದು ಕಾಂಗ್ರೆಸ್ ಗೆ ಬೆಂಬಲ ಘೋಷಿಸಿದ್ದೇನೆ ಎಂದು ತಿಳಿಸಿದ್ದಾರೆ.