ರಾಜ್ಯ ವಿಧಾನಸಭಾ ಚುನಾವಣೆಗೆ ಈಗಾಗಲೇ ದಿನಾಂಕ ಘೋಷಣೆಯಾಗಿದ್ದು, ಮೇ 10 ರಂದು ಮತದಾನ ನಡೆಯಲಿದೆ. ಮೇ 13 ರಂದು ಫಲಿತಾಂಶ ಹೊರ ಬೀಳಲಿದ್ದು, ಬಹುಮತ ಗಳಿಸಿ ಅಧಿಕಾರಕ್ಕೇರಲು ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ನಾಯಕರು ಅಬ್ಬರದ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ.
ಕಾಂಗ್ರೆಸ್ ಹಾಗೂ ಜೆಡಿಎಸ್ ಈಗಾಗಲೇ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದ್ದು, ಬಿಜೆಪಿ ಇನ್ನೆರಡು ದಿನಗಳಲ್ಲಿ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆದರೆ ಕ್ಷೇತ್ರಗಳಲ್ಲಿ ಪಕ್ಷಗಳ ಕಾರ್ಯಕರ್ತರ ಪ್ರಚಾರ ಕಾರ್ಯ ಈಗಾಗಲೇ ಆರಂಭವಾಗಿದ್ದು, ಆದರೆ ಉರಿಬಿಸಿಲು ಇದಕ್ಕೆ ಅಡ್ಡಗಾಲಾಗಿ ಪರಿಣಮಿಸಿದೆ.
ಕೆಲವೊಂದು ಜಿಲ್ಲೆಗಳಲ್ಲಿ ಬೆಳಿಗ್ಗೆ 8 ಗಂಟೆಯಿಂದಲೇ ಬಿಸಿಲಿನ ತಾಪ ಶುರುವಾಗುತ್ತಿದ್ದು, ಇದರ ನಡುವೆಯೂ ಬೆವರೊರೆಸಿಕೊಳ್ಳುತ್ತಾ ಪ್ರಚಾರ ಕಾರ್ಯ ನಡೆಸಲಾಗುತ್ತಿದೆ. ತಂಪು ಪಾನೀಯಗಳಿಗೆ ಈಗ ಎಲ್ಲಿಲ್ಲದ ಬೇಡಿಕೆ ಇದ್ದು, ಎಳನೀರು, ಮಜ್ಜಿಗೆ ಮಾರಾಟವೂ ಜೋರಾಗಿದೆ. ಮುಂದಿನ ದಿನಗಳಲ್ಲಿ ಬಿಸಿಲು ಮತ್ತಷ್ಟು ಜೋರಾಗಿರಲಿದೆ ಎನ್ನಲಾಗಿದ್ದು, ಪ್ರಚಾರ ಕಾರ್ಯದ ಮೇಲೆ ಒಂದಷ್ಟು ಪರಿಣಾಮ ಬೀರಲಿದೆ.