ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಸಿಲಿಕಾನ್ ಸಿಟಿ ಜನರು ತತ್ತರಿಸಿದ್ದಾರೆ. ಗೌರಿ-ಗಣೇಶ ಹಬ್ಬದ ನಡುವೆ ಇದೀಗ ಮತ್ತೆ ಮೂರು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ಬೆಂಗಳೂರಿನಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗಲಿದ್ದು, 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಇನ್ನೂ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ತಡ ರಾತ್ರಿಯಿಂದ ಸುರಿದ ವರುಣಾರ್ಭಟಕ್ಕೆ ಈಗಾಗಲೇ ಸಿಲಿಕಾನ್ ಸಿಟಿ ಜನರು ತತ್ತರಿಸಿದ್ದು, ಹಲವು ಮನೆಗಳಿಗೆ ನೀರು ನಿಗ್ಗಿ ಅವಾಂತರಗಳು ಸೃಷ್ಟಿಯಾಗಿವೆ. ಇನ್ನು ಹಲವೆಡೆ ಮನೆಗಳು ಕುಸಿಯುವ ಭೀತಿ ಎದುರಾಗಿದೆ. ತಗ್ಗು ಪ್ರದೇಶಗಳು ಸಂಪೂರ್ಣ ಜಲಾವೃತವಾಗಿದ್ದು, ಜಲದಿಗ್ಬಂಧನದಿಂದಾಗಿ ಮನೆಯಿಂದ ಹೊರ ಬರಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ.
ರಾಜಧಾನಿಯಲ್ಲಿ ಮಳೆ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಬೆಂಗಳೂರು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಈ ಬಗ್ಗೆ ಆದೇಶ ಹೊರಡಿಸಿದ್ದಾರೆ. ಸೆ.2ರವರೆಗೂ ಬೆಂಗಳೂರಿನಲ್ಲಿ ಮಳೆ ಅಬ್ಬರ ಇರುವ ಸಾಧ್ಯತೆ ಇದೆ ಎನ್ನಲಾಗಿದೆ.