ಮೈಸೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ 2ನೇ ಹಂತದ ಟೋಲ್ ಸಂಗ್ರಹ ಇಂದು ಬೆಳಿಗ್ಗೆಯಿಂದ ಆರಂಭವಾಗಿದ್ದು, ಇದು ಕೇಂದ್ರ ಸರ್ಕಾರದ ಉದ್ಧಟತನ ಎಂದು ಸಚಿವ ಚೆಲುವರಾಯಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಸಚಿವರು, ವಾಹನ ಸವಾರರಿಗೆ ಟೋಲ್ ಕಟ್ಟದಂತೆ ಈಗಾಗಲೇ ಸೂಚಿಸಲಾಗಿದೆ. ಟೋಲ್ ಸಂಗ್ರಹ ವಿರೋಧಿಸಿ ನಡೆಸುತ್ತಿರುವ ಹೋರಾಟಕ್ಕೆ ನಮ್ಮ ಬೆಂಬಲವಿದೆ. ಲೋಕೋಪಯೋಗಿ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು. ರಾಜ್ಯ ಸರ್ಕಾರವನ್ನು ಕೇಂದ್ರ ಸರ್ಕಾರ ಪರಿಗಣನೆಗೆ ತೆಗೆದುಕೊಳ್ಳುತ್ತಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಕೇಂದ್ರ ಎಲ್ಲಿಂದಲೋ ಹಣ ತಂದಿರುವುದಿಲ್ಲ. ರಾಜ್ಯ ಸರ್ಕಾರಗಳು ಕಟ್ಟುವ ತೆರಿಗೆಯಿಂದಲೇ ಅಭಿವೃದ್ಧಿ ಕಾರ್ಯ ಮಾಡುತ್ತದೆ. ಹೀಗಿದ್ದರೂ ರಾಜ್ಯ ಸರ್ಕಾರವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ಟೋಲ್ ಸಮಸ್ಯೆ ಬಗ್ಗೆ ಈಗಾಗಲೇ ಸಿಎಂ ಸಿದ್ದರಾಮಯ್ಯನವರ ಗಮನಕ್ಕೆ ತರಲಾಗಿದೆ. ನಮ್ಮ ಶಾಸಕರು ಮುಖ್ಯಕಾರ್ಯದರ್ಶಿ ಭೇಟಿಯಾಗಿ ಮಾತನಾಡಿದ್ದಾರೆ. ಕಾಮಗಾರಿ ಪೂರ್ಣವಾಗದೇ ಟೋಲ್ ಸಂಗ್ರಹ ಬೇಡ ಎಂದು ಮನವಿ ಮಾಡಿದ್ದಾರೆ. ಸಮಸ್ಯೆ ಸರಿಪಡಿಸಿ ಟೋಲ್ ಸಂಗ್ರಹಿಸಿದರೆ ನಮ್ಮ ಅಡ್ಡಿಯಿಲ್ಲ ಎಂದು ಹೇಳಿದರು.