ಬೆಂಗಳೂರು: ಭಾರಿ ಮಳೆಯಿಂದಾಗಿ ರಾಮನಗರ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿಯುಂಟಾಗಿದ್ದು, ಹಲವು ಗ್ರಾಮಗಳು ಜಲಾವೃತಗೊಂಡಿವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ರಾಮನಗರ ಜಿಲ್ಲೆ ಪ್ರವಾಹ ಪರಿಸ್ಥಿತಿ ಪರಿಶೀಲನೆಗೆ ತೆರಳುವ ಮುನ್ನ ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ, ಮಳೆ ಅಬ್ಬರಕ್ಕೆ ಜಿಲ್ಲೆಯಲ್ಲಿ ಕೆರೆಕೋಡಿ ಒಡೆದಿವೆ. ಕಣ್ವಾ ಜಲಾಶಯ ಭರ್ತಿಯಾಗಿದೆ. ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ. ಬೆಂಗಳೂರು-ಮೈಸೂರು ಹೆದ್ದಾರಿಗೆ ನೀರು ನುಗ್ಗಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ ಎಂದರು.
ದಶಪಥ ರಸ್ತೆ ಕಾಮಗಾರಿ ಕೂಡ ನಡೆಯುತ್ತಿರುವುದರಿಂದ ಭಾರಿ ಮಳೆಯಿಂದಾಗಿ ವಾಹನ ಸಂಚಾರಕ್ಕೆ ಸಮಸ್ಯೆಯಾಗಿದೆ. ಹೆದ್ದಾರಿಯಲ್ಲಿ ನೀರು ಹರಿಯುತ್ತಿರುವುದರಿಂದ ಹಲವು ವಾಹನಗಳು ಮುಳುಗಡೆಯಾಗಿವೆ. ಬೆಂಗಳೂರು-ಮೈಸೂರು ಸಂಪರ್ಕ ಕಲ್ಪಿಸಲು ಪರ್ಯಾಯ ಮಾರ್ಗಕ್ಕೆ ಸೂಚನೆ ನೀಡಲಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಜತೆಯೂ ಸಭೆ ನಡೆಸಲಾಗಿದೆ ಎಂದು ತಿಳಿಸಿದರು.