alex Certify BIG NEWS: ಬೆಲೆ ಏರಿಕೆಯ ಬೆಂಕಿ; ಮೌನಕ್ಕೆ ಶರಣಾದ ಪ್ರಧಾನಿ, ಮುಖ್ಯಮಂತ್ರಿ; ವಿವಾದಗಳಿಗೆ ಬೊಬ್ಬೆಯಿಡುವ ಶ್ರೀಮಂತ ಬಿಜೆಪಿಗರು ಈಗ ಸುಮ್ಮನಿರುವುದೇಕೆ ? ಸರ್ಕಾರದ ವಿರುದ್ಧ ಮತ್ತೆ ಕಿಡಿಕಾರಿದ ಕುಮಾರಸ್ವಾಮಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಲೆ ಏರಿಕೆಯ ಬೆಂಕಿ; ಮೌನಕ್ಕೆ ಶರಣಾದ ಪ್ರಧಾನಿ, ಮುಖ್ಯಮಂತ್ರಿ; ವಿವಾದಗಳಿಗೆ ಬೊಬ್ಬೆಯಿಡುವ ಶ್ರೀಮಂತ ಬಿಜೆಪಿಗರು ಈಗ ಸುಮ್ಮನಿರುವುದೇಕೆ ? ಸರ್ಕಾರದ ವಿರುದ್ಧ ಮತ್ತೆ ಕಿಡಿಕಾರಿದ ಕುಮಾರಸ್ವಾಮಿ

ಬೆಂಗಳೂರು: ಬೆಲೆ ಏರಿಕೆ ವಿರುದ್ಧ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬೆಲೆ ಏರಿಕೆ ಬೆಂಕಿಯಲ್ಲಿ ಜನರು ನರಳುತ್ತಿದ್ದರೆ ಶ್ರೀಮಂತ ಬಿಜೆಪಿ ನಾಯಕರಿಗೆ ಸಂಭ್ರಮವೇ ? ಎಂದು ಪ್ರಶ್ನಿಸಿದ್ದಾರೆ.

ಹಲಾಲ್ ಹಾಲಾಹಲದ ನಡುವೆಯೇ ಇಂದು ಬೆಳಗ್ಗೆ ಬರಸಿಡಿಲಿನಂತೆ ಅಪ್ಪಳಿಸಿದ ಸುದ್ದಿ. ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ; 13 ದಿನಗಳಲ್ಲಿ 8 ರೂ. ಜಿಗಿತ! ಇದಪ್ಪಾ ʼಬಹುಜನ ಹಿತಾಯ, ಬಹುಜನ ಸುಖಾಯʼ ಎಂದು ಭಾಷಣ ಬಿಗಿಯುವ ಬಿಜೆಪಿ ಆಡಳಿತದಲ್ಲಿ ಇಂಡಿಯಾ ಶೈನಿಂಗ್ ಎಂದು ಸರಣಿ ಟ್ವೀಟ್ ಮೂಲಕ ಟೀಕಿಸಿರುವ ಹೆಚ್.ಡಿ.ಕೆ. 13 ದಿನದಿಂದ ಬೆಲೆ ಏರಿಕೆ ನಿರಂತರ. ಎರಡೂ ತೈಲಗಳ ಬೆಲೆ 8 ರೂ. ಹೆಚ್ಚಳ. ಖಜಾನೆ ಭರ್ತಿಗೆ ಷೇರು ಸೂಚ್ಯಂಕವನ್ನು ಕುಣಿಸಿದಂತೆ, ಬೆಲೆ ಸೂಚ್ಯಂಕದ ಕರಡಿ ಕುಣಿತವೂ ಭರ್ಜರಿಯಾಗಿದೆ ಎಂದು ಗುಡುಗಿದ್ದಾರೆ.

2018ರಲ್ಲಿ ನಾನು ಸಿಎಂ ಆಗಿದ್ದಾಗ ಸಾಲ ಮನ್ನಾಕ್ಕಾಗಿ ಪೆಟ್ರೋಲ್ ಲೀಟರಿಗೆ 1.12 ಪೈಸೆ, & ಡೀಸೆಲ್ ಬೆಲೆಯಲ್ಲಿ ಲೀಟರಿಗೆ 1.14 ಪೈಸೆ ಹೆಚ್ಚಳ ಮಾಡಿದ್ದಕ್ಕೆ ಬಿಜೆಪಿ ನಾಯಕರು ಕೂಗಾಡಿ ಗಲಾಟೆ ಎಬ್ಬಿಸಿದ್ದರು. ಬೆಲೆ ಹೆಚ್ಚಳದ ಈ ಹಣ ರೈತರಿಗೆ ಹೋಗಿಬಿಡುತ್ತದಲ್ಲ ಎಂದು ಅವರ ಹೊಟ್ಟೆ ಉರಿದುಹೋಯಿತು. ಹಾದಿಬೀದಿಯಲ್ಲಿ ಖಾಲಿ ಸಿಲಿಂಡರುಗಳನ್ನು ಹೊತ್ತ ಬಿಜೆಪಿಗರು ಈಗೇಕೆ ಮೌನಕ್ಕೆ ಶರಣಗಾಗಿದ್ದಾರೆ ? ಬೆಲೆ ಏರಿಕೆಯಿಂದ ಬಡವರ ಹೊಟ್ಟೆ ಉರಿದರೆ ನಿಮಗೆ ಖುಷಿಯಾ? ಬನ್ನಿ, ಬೀದಿಗೆ ಬಂದು ಪ್ರತಿಭಟನೆ ಮಾಡಿ, ಕೇಂದ್ರ ಸರಕಾರದ ವಿರುದ್ಧ ಧಿಕ್ಕಾರ ಕೂಗಿ ಎಂದು ಹೇಳಿದ್ದಾರೆ.

ಸಿಮೆಂಟ್, ಕಬ್ಬಿಣ, ಆಹಾರ ಪದಾರ್ಥ ಸೇರಿ ಸಾಮಾನ್ಯ ವ್ಯಕ್ತಿ ಬಳಸುವ ಪ್ರತಿ ವಸ್ತುವಿನ ಬೆಲೆ ನಿತ್ಯವೂ ಜಿಗಿಯುತ್ತಿದೆ. ಶ್ರೀಸಾಮಾನ್ಯನು ಮನೆ ಕಟ್ಟುವ ಕನಸು ಇನ್ನು ಬರೀ ಕನಸೇ. ಅವನ ಜೇಬು ಖಾಲಿಯಾಗುತ್ತಿದೆ, ಕೆಲವರ ಜೇಬು ತುಂಬುತ್ತಿದೆ!! ಬಿಜೆಪಿ ಭಾರತದಲ್ಲಿ ಉದ್ಯಮಿಗಳು ಜಗತ್ತಿನ ಟಾಪ್ ಶ್ರೀಮಂತರಾಗುತ್ತಿದ್ದಾರೆ. ಹಿಜಾಬ್, ಕೇಸರಿ ಶಾಲು, ಟಿಪ್ಪು ಪಠ್ಯ, ಮುಸ್ಲಿಂ ವರ್ತಕರಿಗೆ ನಿಷೇಧ, ಹಲಾಲ್ ಕಟ್ ಬಗ್ಗೆ ಅಬ್ಬರಿಸಿ ಬೊಬ್ಬಿರಿಯುವ ʼಶ್ರೀಮಂತರ ಪಕ್ಷ ಬಿಜೆಪಿʼಯು ಬೆಲೆ ಏರಿಕೆ ಬಗ್ಗೆ ಮಾತ್ರ ಮೌನವಾಗಿದೆ ! ರಾಜ್ಯ ಸರಕಾರವೂ ಮೌನ ! ಮುಖ್ಯಮಂತ್ರಿಗಳೂ ಮೌನ ! ಮೌನಂ ಶರಣಂ ಗಚ್ಛಾಮಿ. ಎಂದು ವ್ಯಂಗ್ಯವಾಡಿದ್ದಾರೆ.

ಬೆಲೆ ಏರಿಕೆ ಬಗ್ಗೆ ಜನರ ಆಕ್ರೋಶ ಎಲ್ಲಿ ಆಸ್ಫೋಟಗೊಂಡು ಬಿಜೆಪಿ ಬುಡಕ್ಕೆಲ್ಲಿ ಬೆಂಕಿ ಬೀಳುತ್ತದೋ ಎಂಬ ಭಯದಿಂದ ಆ ಮುಗ್ಧಜನರ ಮನಸ್ಸನ್ನು ಸೂಕ್ಷ್ಮ ವಿಷಯಗಳ ಕಡೆ ಹೊರಳುವಂತೆ ಮಾಡಲಾಗಿದೆ. ʼ150 ಸೀಟಿನ ರೋಡ್ ಮ್ಯಾಪ್ ಎಲ್ಲಿ ಮಣ್ಣುಪಾಲಾಗುತ್ತದೋʼ ಎಂದು ಹಿಂದುತ್ವದ ವಿನಾಶಕ್ಕೆ ಹಿಂಸಾಚಾರದ ಶಂಖ ಊದಲಾಗಿದೆ. ಘನವೇತ್ತ ಮಾಜಿ ಸಿಎಂ, ಮಾಜಿ ಕೇಂದ್ರಮಂತ್ರಿಗಳೂ ಡಿ.ವಿ.ಸದಾನಂದಗೌಡರು, ಬೆಲೆ ಏರಿಕೆಗೆ ಹಿಂದಿನ ಯುಪಿಎ ಸರಕಾರ ಕಾರಣ ಎಂದಿದ್ದಾರೆ. 8 ವರ್ಷವಾದರೂ ಯುಪಿಎ ಮಾಡಿದ ತಪ್ಪು ಸರಿ ಮಾಡಲಿಲ್ಲ, ಏಕೆ ? ಅಡುಗೆ ಮನೆಗಳಲ್ಲಿ ತಾಯಂದಿರು, ʼಬೆಲೆ ಏರಿಕೆ ಬೆಂಕಿʼಯಲ್ಲಿ ಬೇಯುತ್ತಿದ್ದರೆ ನಿಮಗೆ ರಾಜಕೀಯ ಮುಖ್ಯವಾಗಿದೆ. ಬಿಜೆಪಿ ಎಂದರೆ ಭಾರತೀಯ ಜನತಾ ಪಕ್ಷವಲ್ಲ, ಬಡವರ ರಕ್ತಹೀರಿ ಸಿರಿವಂತರ ಖಜಾನೆ ಭರ್ತಿ ಮಾಡುವ ʼಬಲ್ಲಿದ ಜನರ ಪಕ್ಷʼ. ಬೆಲೆ ಶೂಲದಿಂದ ಬಡಜನರನ್ನು ಬರ್ಬಾದ್ ಮಾಡುತ್ತಿರುವ ಪಕ್ಷ ಎಂದು ವಾಗ್ದಾಳಿ ನಡೆಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...