ಬೆಂಗಳೂರು: ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನಾಯಕರು ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಸಿಲಿಂಡರ್, ಬೈಕ್ ಗಳಿಗೆ ಹೂವಿನ ಹಾರ ಹಾಕಿ, ಚಕ್ಕಡಿ ಗಾಡಿಯಲ್ಲಿ ಮೆರವಣಿಗೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ನಾಯಕರು, ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್, ದಿನಬಳಕೆ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆ ಆಗುತ್ತಿದ್ದು, ಜನಸಾಮಾನ್ಯರ ಬದುಕು ದುಸ್ತರವಾಗಿದೆ ಎಂದು ಕಿಡಿಕಾರಿದರು.
ಈ ವೇಳೆ ಮಾತನಾಡಿದ ಡಿ.ಕೆ. ಶಿವಕುಮಾರ್, ಬೆಲೆ ಏರಿಕೆ ಗಗನಕ್ಕೇರಿದೆ. ಆದಾಯ ಪಾತಾಳಕ್ಕೆ ಇಳಿದಿದೆ. ಇಂದಿಗೆ ಆರ್ಥಿಕ ವರ್ಷದ ಲೆಕ್ಕಾಚಾರ ಮುಕ್ತಾಯವಾಗಿದೆ. ಈ ನಿಟ್ಟಿನಲ್ಲಿ ಇಂದೇ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ಸಿಲಿಂಡರ್, ಬೈಕ್ ಗಳಿಗೆ ಪೂಜೆ ಮಾಡಿ, ಹಾರ ಹಾಕಿ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದೇವೆ. ಜನರು ಅವಕಾಶಕ್ಕಾಗಿ ಕಾಯುತ್ತಿದ್ದಾರೆ. ಚುನಾವಣೆಯಲ್ಲಿ ಬಿಜೆಪಿ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.