ಶಿವಮೊಗ್ಗ: ಭಜರಂಗದಳ ಕಾರ್ಯಕರ್ತನ ಮೃತದೇಹ ಮೆರವಣಿಗೆ ವೇಳೆ ಶಿವಮೊಗ್ಗದಲ್ಲಿ ಮತ್ತೆ ಕಲ್ಲುತೂರಾಟ ನಡೆದಿದ್ದು, ನಗರದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ.
ದುಷ್ಕರ್ಮಿಗಳು ನಿನ್ನೆ ರಾತ್ರಿ ಭಜರಂಗದಳ ಕಾರ್ಯಕರ್ತ ಹರ್ಷ ಎಂಬಾತನನ್ನು ಬರ್ಬರವಾಗಿ ಹತ್ಯೆ ಮಾಡಿದ್ದರು. ಘಟನೆ ಬಳಿಕ ಜಿಲ್ಲೆಯಲ್ಲಿ ಕಲ್ಲುತೂರಾಟ ನಡೆಸಿ, ವಾಹನಗಳಿಗೆ ಬೆಂಕಿ ಹಚ್ಚಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು.
ಇಂದು ಹರ್ಷ ಮೃತದೇಹದ ಮರಣೋತ್ತರ ಪರೀಕ್ಷೆ ಬಳಿಕ ಪೊಲೀಸ್ ಭದ್ರತೆಯಲ್ಲಿ ಮೆಗ್ಗಾನ್ ಆಸ್ಪತ್ರೆಯಿಂದ ಬಸವನ ಬೀದಿಯಲ್ಲಿರುವ ಹರ್ಷನ ಮನೆವರೆಗೆ ಪಾರ್ಥಿವಶರೀರದ ಮೆರವಣಿಗೆ ನಡೆಸಲಾಗುತ್ತಿದ್ದು, ಈ ವೇಳೆ ಎನ್.ಟಿ.ರಸ್ತೆಯಲ್ಲಿ ಮೆರವಣಿಗೆ ವೇಳೆ ಉದ್ರಿಕ್ತರ ಗುಂಪು ಕಲ್ಲುತೂರಾಟ ನಡೆಸಿದೆ. ಘಟನೆಯಲ್ಲಿ ಎರಡು ಬೈಕ್ ಗಳು ಜಖಂಗೊಂಡಿವೆ.
ನಿಷೇಧಾಜ್ಞೆ ಜಾರಿಯಲ್ಲಿದ್ದರೂ, ಪೊಲೀಸರು ಕಟ್ಟೆಚ್ಚರ ವಹಿಸಿದ್ದರು ಮೃತದೇಹದ ಮೆರವಣಿಗೆ ವೇಳೆ ಮತ್ತೆ ಅಹಿತಕರ ಘಟನೆಗಳು ನಡೆದಿದ್ದು, ಶಿವಮೊಗ್ಗದಲ್ಲಿ ಪರಿಸ್ಥಿತಿ ಬೂದಿಮುಚ್ಚಿದ ಕೆಂಡದಂತಿದೆ.