ನವದೆಹಲಿ: ಭಾರತದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಪ್ರತಿಜ್ಞಾವಿಧಿ ಸ್ವೀಕರಿಸಿದರು. ಈ ಮೂಲಕ ರಾಷ್ಟ್ರಪತಿ ಹುದ್ದೆ ಅಲಂಕರಿಸಿದ ದೇಶದ ಮೊದಲ ಬುಡಕಟ್ಟು ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಓಡಿಶಾ ಮೂಲದ ಸಂತಾಲಿ ಬುಡಕಟ್ಟು ಸಮುದಾಯಕ್ಕೆ ಸೇರಿದ ದ್ರೌಪದಿ ಮುರ್ಮು ರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸುವ ಮೂಲಕ ದೇಶದ ಎರಡನೇ ಮಹಿಳಾ ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದರು.
ಸಂಸತ್ ಭವನದ ಸೆಂಟ್ರಲ್ ಹಾಲ್ ನಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ಎನ್.ವಿ. ರಮಣ ಅವರು ಚುನಾಯಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ಈ ವೇಳೆ ನಿರ್ಗಮಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಅಧಿಕಾರ ಹಸ್ತಾಂತರ ಮಾಡಿದರು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಸರ್ಕಾರದ ಸಚಿವರು, ಸಂಸದರು, ಸಿಎಂ ಬಸವರಾಜ್ ಬೊಮ್ಮಾಯಿ ಸೇರಿದಂತೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಉಪಸ್ಥಿತರಿದ್ದರು.