ವಿಜಯಪುರ: ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಭಾರತ ಹಲವು ದೇಶಗಳಿಗೆ ಲಸಿಕೆ ರಫ್ತು ಮಾಡಿದೆ. ಇಂದು ಭಾರತ ಬೇಡುವ ರಾಷ್ಟ್ರವಲ್ಲ; ಕೊಡುವ ರಾಷ್ಟ್ರವಾಗಿ ನಿರ್ಮಾಣವಾಗಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ತಿಳಿಸಿದ್ದಾರೆ.
ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಿಜೆಪಿ ಜನಸಂಕಲ್ಪ ಯಾತ್ರೆ ಉದ್ದೇಶಿಸಿ ಮಾತನಾಡಿದ ಜೆ.ಪಿ.ನಡ್ಡಾ, ದೇಶದಲ್ಲಿ ನೂರು ಕೋಟಿಗೂ ಅಧಿಕ ಜನರಿಗೆ ಕೋವಿಡ್ ಲಸಿಕೆ ನೀಡಲಾಗಿದೆ. ಇಂದು ಚೀನಾ ಕೋವಿಡ್ ಮಹಾ ಮಾರಿಯಿಂದಾಗಿ ತತ್ತರಿಸಿದೆ. ಸಾವಿನ ಸಂಖ್ಯೆ ಹೆಚ್ಚುತ್ತಿದ್ದರೂ ಚೀನಾ ಸರ್ಕಾರ ಮಾಹಿತಿ ಬಚ್ಚಿಡುತ್ತಿದೆ ಎಂದು ಹೇಳಿದರು.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿದೆ. ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್ ಹಾಗೂ ಸಬ್ ಕಾ ಪ್ರಯಾಸ್ ಅಡಿ ದೇಶವನ್ನು ಅಭಿವೃದ್ಧಿಗೊಳಿಸುವ ಗುರಿ ಬಿಜೆಪಿ ಹೊಂದಿದೆ. ದೇಶದ ಅಭಿವೃದ್ಧಿಯಲ್ಲಿ ಕರ್ನಾಟಕದ ಕೊಡುಗೆ ಅಪಾರ ಎಂದು ಶ್ಲಾಘಿಸಿದರು.
ಪ್ರಧಾನಿ ಮೋದಿಯಿಂದಾಗಿ ಡಿಜಿಟಲ್ ಕ್ಷೇತ್ರದಲ್ಲಿ ಕ್ರಾಂತಿಯಾಗಿದೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಮೇಕ್ ಇನ್ ಇಂಡಿಯಾ ಅಡಿ ದೇಶದಲ್ಲಿಯೇ ಮೊಬೈಲ್ ಉತ್ಪಾದಿಸುತ್ತಿದ್ದೇವೆ. ಆಟೋ ಮೊಬೈಲ್ ಇಂಡಸ್ಟ್ರಿಯಲ್ಲಿ ಭಾರತ ಮೂರನೇ ಸ್ಥಾನದಲ್ಲಿದೆ ಎಂದು ಹೇಳಿದರು.