ಬೆಂಗಳೂರು: ಮುಂದಿನ 5 ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ನಾಳೆ ನಡೆಯಲಿರುವ ವಿಧಾನಸಭಾ ಚುನಾವಣೆ ಮತದಾನಕ್ಕೆ ವರುಣಾರ್ಭಟದ ಭೀತಿ ಎದುರಾಗಿದೆ. ನಾಳೆಯಿಂದ ಮೇ 13ರವರೆಗೆ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ.
ಮಳೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹಾಸನ, ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಈ ನಡುವೆ ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥಗೊಂಡಿದೆ. ಬಹುತೇಕ ಪ್ರದೇಶ ಜಲಾವೃತಗೊಂಡಿದೆ. ಅಂಗಡಿ, ಮನೆಗಳಿಗೆ ನೀರು ನುಗ್ಗಿದ್ದು ಅವಾಂತರಗಳು ಸೃಷ್ಟಿಯಾಗಿವೆ. ರಸ್ತೆಯ ಮೇಲೆ ಚರಂಡಿ ನೀರು ಉಕ್ಕಿ ಹರಿಯುತ್ತಿದ್ದು, ನೀರಿನ ರಭಸಕ್ಕೆ ಬೈಕ್ ಗಳು ಕೊಚ್ಚಿ ಹೋಗಿವೆ. ಮರಗಳು ಧರಾಶಾಹಿಯಾಗಿದ್ದು, ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಇನ್ನು ಗದಗ, ಕಲಬುರ್ಗಿ ಜಿಲ್ಲೆಯಲ್ಲಿಯೂ ಧಾರಾಕಾರ ಮಳೆಯಾಗುತ್ತಿದೆ.