ಬೆಂಗಳೂರು: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ವಿಚಾರವಾಗಿ ಕೇಂದ್ರ ಗೃಹ ಸಚಿವರ ಸಭೆಯಲ್ಲಿ ನಾನೂ ಭಾಗಿಯಾಗುತ್ತಿದ್ದೇನೆ. ಸಿಎಂ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ನಾನೂ ದೆಹಲಿಗೆ ತೆರಳುತ್ತಿದ್ದೇನೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ರಾಜ್ಯ ಗೃಹ ಇಲಾಖೆ ಬಗ್ಗೆಯೂ ಅಮಿತ್ ಶಾ ಅವರೊಂದಿಗೆ ಚರ್ಚಿಸಲಾಗುವುದು. ಗಡಿ ವಿಚಾರವಾಗಿ ರಾಜ್ಯದ ನಿಲುವನ್ನು ಸ್ಪಷ್ಟಪಡಿಸುತ್ತೇವೆ ಎಂದರು.
ಮತಾಂತರ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದಲ್ಲಿ ಕಾಯ್ದೆ ಜಾರಿ ಮಾಡಿದ್ದೇವೆ. ಚಿತ್ರದುರ್ಗದಲ್ಲಿ ಹೆಚ್ಚು ಮತಾಂತರವಾಗುತ್ತಿರುವ ಬಗ್ಗೆ ಮಾಹಿತಿ ಬಂದಿದೆ. ಹಲವು ಸ್ವಾಮೀಜಿಗಳೂ ಮಾಹಿತಿ ನೀಡಿದ್ದಾರೆ. ಮತಾಂತರದ ಬಗ್ಗೆ ದೂರು ನೀಡಿದರೆ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ. ಸಧ್ಯ ವಿಶೇಷ ಟಾಸ್ಕ್ ಫೋರ್ಸ್ ರಚನೆ ಅಗತ್ಯವಿಲ್ಲ ಎಂದು ಹೇಳಿದರು.
ಲವ್ ಜಿಹಾದ್ ತಡೆಗೆ ಹಿಂದೂ ಸಂಘಟನೆಗಳು ಮನವಿ ಮಾಡಿದ್ದಾರೆ. ಮತಾಂತರ ನಿಷೇಧ ಕಾಯ್ದೆಯಲ್ಲೇ ಲವ್ ಜಿಹಾದ್ ತಡೆ ಒಳಗೊಂಡಿದೆ ಎಂದು ಹೇಳಿದರು.
ಇದೇ ವೇಳೆ ಕಾಂಗ್ರೆಸ್ ಬಸ್ ಯಾತ್ರೆ ಕುರಿತು ಮಾತನಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ, ಸಿದ್ದರಾಮಯ್ಯ ಬಸ್ ಯಾತ್ರೆಯನ್ನಾದರೂ ಮಾಡಲಿ, ತಿರುಪತಿ ಯಾತ್ರೆಯನ್ನಾದರೂ ಮಾಡಲಿ. ಚುನಾವಣೆಯಲ್ಲಿ ಬಿಜೆಪಿಯೇ ಅತಿ ಹೆಚ್ಚು ಮತಗಳನ್ನು ಗೆದ್ದು ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.