ತುಮಕೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಾಂತರ ಪರ್ವ ಆರಂಭವಾಗಿದ್ದು, ಟಿಕೆಟ್ ಆಕಾಂಕ್ಷಿಗಳು ಸ್ವಪಕ್ಷ ಬಿಟ್ಟು ಬೇರೆ ಪಕ್ಷದತ್ತ ಮುಖ ಮಾಡುವುದು ಸಾಮಾನ್ಯ. ಹೊಸ ಬೆಳವಣಿಗೆಯೊಂದರಲ್ಲಿ ಚುನಾವಣೆಯಿಂದ ಹಿಂದೆ ಸರಿದಿದ್ದ ಮಧುಗಿರಿ ಜೆಡಿಎಸ್ ಶಾಸಕ ವೀರಭದ್ರಯ್ಯ ಇದೀಗ ಯೂಟರ್ನ್ ಹೊಡೆದಿದ್ದಾರೆ.
ಮಧುಗಿರಿಯಿಂದ ನಾನೇ ಸ್ಪರ್ಧೆ ಮಾಡುತ್ತೇನೆ ಎಂದು ಹೇಳುವ ಮೂಲಕ ತಮ್ಮ ನಿರ್ಧಾರ ಬದಲಿಸಿದ್ದಾಗಿ ತಿಳಿಸಿದ್ದಾರೆ. ಕೆಲ ಕಾರಣಗಳಿಂದ ಹಿಂದೆ ಸರಿಯುವ ನಿರ್ಧಾರ ಮಾಡಿದ್ದೆ. ನನ್ನ ಕುಟುಂಬದವರು ಕೂಡ ಚುನಾವಣೆಯಲ್ಲಿ ಸ್ಪರ್ಧಿಸುವುದು ಬೇಡ ಎಂದಿದ್ದರು. ಹೀಗಾಗಿ ಸ್ಪರ್ಧಿಸದಿರಲು ತೀರ್ಮಾನಿಸಿದ್ದೆ. ಆದರೆ ಕಾರ್ಯಕರ್ತರ ಒತ್ತಾಯದ ಮೇರೆಗೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ ಎಂದು ಹೇಳಿದ್ದಾರೆ.
ಈ ನಿಟ್ಟಿನಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗು ಜೆಡಿಎಸ್ ನಾಯಕರೊಂದಿಗೂ ಚರ್ಚೆ ನಡೆಸಿದ್ದೇನೆ ಎಂದು ವೀರಭದ್ರಯ್ಯ ತಿಳಿಸಿದ್ದಾರೆ.