ಕಾರವಾರ: ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಅದರಲ್ಲಿಯೂ ಉತ್ತರ ಕನ್ನಡ ಜಿಲ್ಲೆಯ ಜನರು ಮಳೆ ಆರ್ಭಟಕ್ಕೆ ತತ್ತರಿಸಿದ್ದಾರೆ. ಈ ನಡುವೆ ಸಿದ್ದಾಪುರ ತಾಲೂಕಿನಲ್ಲಿ ಮಳೆ ಅವಾಂತರಕ್ಕೆ ಮನೆ ಕುಸಿದುಬಿದ್ದು ಯುವಕನೋರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ.
ಸಿದ್ದಾಪುರ ತಾಲೂಕಿನಾದ್ಯಂತ ನಿನ್ನೆಯಿಂದ ನಿರಂತರ ಮಳೆಯಾಗುತ್ತಿದ್ದು, ಇಂದು ಬೆಳಿಗ್ಗೆ ಕ್ಯಾದಗಿ ಗ್ರಾಮದಲ್ಲಿ ಮಳೆಯಿಂದಾಗಿ ಮನೆಯೊಂದು ಕುಸಿದು ಬಿದ್ದಿದೆ. ಪರಿಣಾಮ ಮನೆಯಲ್ಲಿ ವಾಸವಾಗಿದ್ದ ಯುವಕ ಸಾವನ್ನಪ್ಪಿದ್ದು, ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ.
23 ವರ್ಷದ ಚಂದ್ರಶೇಖರ ನಾರಾಯಣ ಮೃತ ಯುವಕ. ಪದ್ಮಾವತಿ ನಾರಾಯಣ ಎಂಬ ಮಹಿಳೆ ಗಾಯಗೊಂಡಿದ್ದಾರೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಅದರಲ್ಲಿಯೂ ಉತರ ಕನ್ನಡ ಜಿಲ್ಲೆಯ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲಾ, ಕಾರವಾರ, ಶಿರಸಿ, ಸಿದ್ದಾಪುರ, ದಾಂಡೇಲಿ ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ನದಿ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಜಿಲ್ಲೆಯಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಮುಂದುವರೆಯಲಿದ್ದು, ನದಿ ಪಾತ್ರದ ಜನರು ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.