ಮರಾಠ ಸಮುದಾಯದ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿದ್ದು, ಮಾರುತಿ ರಾವ್ ಮುಳೆ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಇದರ ಉದ್ಘಾಟನೆ ಜುಲೈ 19ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ.
ಮರಾಠ ಅಭಿವೃದ್ಧಿ ನಿಗಮಕ್ಕೆ 100 ಕೋಟಿ ರೂಪಾಯಿ ಅನುದಾನ ಒದಗಿಸಲಾಗಿದ್ದು, ಬುಧವಾರದಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಧ್ಯಕ್ಷ ಮಾರುತಿ ರಾವ್ ಮುಳೆ, ರಾಜ್ಯದಾದ್ಯಂತ ಮರಾಠ ಶೈಲಿಯ 40 ಮಿಲಿಟರಿ ಹೋಟೆಲ್ ಗಳ ಆರಂಭಕ್ಕೆ ಆರ್ಥಿಕ ನೆರವು ನೀಡಲಾಗುವುದು ಎಂದು ಘೋಷಿಸಿದ್ದಾರೆ.
ಬೆಂಗಳೂರು ನಗರದಲ್ಲಿ 10 ಹಾಗೂ ಉಳಿದ 30 ಜಿಲ್ಲೆಗಳಲ್ಲಿ ತಲಾ ಒಂದು ಮರಾಠ ಶೈಲಿಯ ಮಿಲಿಟರಿ ಹೋಟೆಲ್ ಗಳನ್ನು ತೆರೆಯಲು ಆರ್ಥಿಕ ನೆರವು ನೀಡಲಾಗುತ್ತಿದ್ದು, ಪ್ರತಿ ಹೋಟೆಲ್ ಗೆ ತಲಾ 5 ಲಕ್ಷ ರೂಪಾಯಿ ಸಹಾಯಧನ ಮತ್ತು 2.5 ಲಕ್ಷ ರೂಪಾಯಿ ಸಾಲವನ್ನು ನೀಡಲಾಗುತ್ತದೆ ಎಂದು ತಿಳಿಸಿದರು.
ಈ ಯೋಜನೆ ಅನುಷ್ಠಾನಕ್ಕೆ ಈಗಾಗಲೇ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅನುಮತಿ ದೊರೆತ ತಕ್ಷಣವೇ ಜಾರಿಗೊಳಿಸಲಾಗುತ್ತದೆ ಎಂದು ತಿಳಿಸಿದ ಅವರು, ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಪಡೆಯುವ ಮರಾಠ ಸಮುದಾಯದ ವಿದ್ಯಾರ್ಥಿಗಳಿಗೆ 5 ವರ್ಷಗಳ ಕಾಲ ತಲಾ ಒಂದು ಲಕ್ಷ ರೂಪಾಯಿ ಪ್ರೋತ್ಸಾಹ ಧನವನ್ನು ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು.