ಉಡುಪಿ: ಭಾರಿ ಮಳೆಯಿಂದಾಗಿ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಅವಾಂತರಗಳು ಸೃಷ್ಟಿಯಾಗಿದ್ದು, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಹಲವೆಡೆ ಪ್ರವಾಹ ಭೀತಿ ಎದುರಾಗಿದ್ದು, ಜನರು ಕಂಗಾಲಾಗಿದ್ದಾರೆ.
ಎಡೆಬಿಡದೇ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಉಡುಪಿ, ಉತ್ತರಕನ್ನಡ, ದಕ್ಷಿಣಕನ್ನಡ, ಚಿಕ್ಕಮಗಳೂರು, ಕೊಡಗು ಭಾಗಗಳಲ್ಲಿ ಹಲವೆಡೆ ಗುಡ್ಡ ಕುಸಿತವಾಗಿದ್ದು, ಮನೆಗಳು ಸಂಪೂರ್ಣ ಹಾನಿಯಾಗಿವೆ. ಇನ್ನೊಂದೆಡೆ ನದಿಗಳು ತುಂಬಿ ಹರಿಯುತ್ತಿದ್ದು, ಹಲವು ಗ್ರಾಮಗಳು ಜಲಾವೃತಗೊಂಡಿವೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮುಂಜಾಗೃತಾ ಕ್ರಮವಾಗಿ ಇನ್ನೂ ಎರಡು ದಿನ ಶಾಲಾ-ಕಾಲೇಜಿಗೆ ರಜೆ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇನ್ನೂ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಉಡುಪಿಯ ಮರವಂತೆ ಬೀಚ್ ನಲ್ಲಿ ಕಡಲ್ಕೊರೆತ ಹೆಚ್ಚುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಟಿಲು ದುರ್ಗಾಪರಮೇಶ್ವರಿ ದೇವಸ್ಥಾನ ಬಳಿಯ ನಂದಿನಿ ನದಿಯ ಆರ್ಭಟ ಹೆಚ್ಚಿದ್ದು, ಸುತ್ತಮುತ್ತಲ ಗ್ರಾಮಗಳಿಗೆ ಪ್ರವಾಹ ಭೀತಿ ಎದುರಾಗಿದೆ.
ದಕ್ಷಿಣ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗುತ್ತಿದ್ದು, ಸಂಕಷ್ಟಕ್ಕೆ ಸಿಲುಕಿರುವ ಜನರ ರಕ್ಷಣೆಗಾಗಿ ವಿಪತ್ತು ನಿರ್ವಹಣಾ ಕೇಂದ್ರದಿಂದ ಸಹಾಯವಾಣಿ ಆರಂಭಿಸಲಾಗಿದೆ.
ದಕ್ಷಿಣ ಕನ್ನಡ ಸಹಾಯವಾಣಿ: 1077-0824-2442500, 9483908000 ಈ ಸಂಖ್ಯೆಗೆ ಕರೆ ಮಾಡಬಹುದು,
ಉಡುಪಿ ಸಹಾಯವಾಣಿ: 1077-0820-2520417 ಈ ಸಂಖ್ಯೆಗೆ ಕರೆ ಮಾಡಬಹುದು.