ಮಂಡ್ಯ: ರಾಜ್ಯಾದ್ಯಂತ ವರುಣಾರ್ಭಟಕ್ಕೆ ಜನರು ತತ್ತರಿಸಿದ್ದು, ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ. ಮಳೆಹಾನಿ, ಸಮಸ್ಯೆಗಳಿಗೆ ರೊಚ್ಚಿಗೆದ್ದ ಮಂಡ್ಯ ಜಿಲ್ಲೆಯ ಜನರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.
ಭಾರಿ ಮಳೆಯಿಂದಾಗಿ ಮಂಡ್ಯ ಜಿಲ್ಲೆಯ ಹಲವು ಪ್ರದೇಶಗಳು ಜಲಾವೃತಗೊಂಡಿದ್ದು, ಮನೆಗಳಿಗೆ ನೀರು ನುಗ್ಗಿ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಅದರಲ್ಲಿಯೂ ಬಿಡಿ ಕಾಲೋನಿ ನಿವಾಸಿಗಳ ಸಂಕಷ್ಟ ಹೇಳತೀರದಾಗಿದೆ. ಜನಪ್ರತಿನಿಧಿಗಳಾಗಲಿ, ಜಿಲ್ಲಾಡಳಿತದ ಅಧಿಕಾರಿಗಳಾಗಲಿ ಯಾರೊಬ್ಬರೂ ಜನರ ಸಮಸ್ಯೆಯತ್ತ ಕಿವಿಗೊಡುತ್ತಲೂ ಇಲ್ಲ. ಬೇಸತ್ತ ಸ್ಥಳೀಯರು ಇಂದು ಅಧಿಕಾರಿಗಳ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದ್ದಾರೆ.
ಕಳೆದ ಮೂರು ವರ್ಷಗಳಿಂದ ಮಳೆಗಾಲದಲ್ಲಿ ಬಿಡಿ ಕಾಲೋನಿಯಲ್ಲಿ ಸಮಸ್ಯೆಯಾಗುತ್ತಿದ್ದು, ಈ ಬಾರಿ ಮಳೆ ಪ್ರಮಾಣ ಹೆಚ್ಚಾಗಿದ್ದರಿಂದ ಅವಾಂತರಗಳ ಸರಮಾಲೆಯೇ ಸೃಷ್ಟಿಯಾಗಿದೆ. ಇಷ್ಟಾದರೂ ಅಧಿಕಾರಿಗಳು ದಿವ್ಯ ನಿರ್ಲಕ್ಷ ಮೆರೆದಿದ್ದಾರೆ ಎಂದು ಕಿಡಿಕಾರಿದ್ದಾರೆ. ಇದೇ ವೇಳೆ ಅಧಿಕಾರಿಗಳ ವಿರುದ್ಧ ರೊಚ್ಚಿಗೆದ್ದ ಸ್ಥಳೀಯರು ಹಾಗೂ ಪ್ರತಿಭಟನಾ ನಿರತರು ಜಿಲ್ಲಾಧಿಕಾರಿ ಕಚೇರಿಗೆ ನುಗ್ಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಅಂತಿಮವಾಗಿ ಜಿಲ್ಲಾಧಿಕಾರಿ ಹಾಗೂ ಕಚೇರಿ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ.