ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ವರುಣಾರ್ಭಟಕ್ಕೆ ಜನರು ತತ್ತರಿಸಿದ್ದು, ರಾತ್ರಿಯಿಡಿ ಸುರಿದ ಗುಡುಗು ಸಹಿತ ಭಾರಿ ಮಳೆಗೆ ಹಲವು ಮನೆಗಳಿಗೆ ನೀರು ನುಗ್ಗಿ ಜನರು ಪರದಾಡುತ್ತಿದ್ದಾರೆ.
ಬಡಾವಣೆಗಳು ಜಲಾವೃತಗೊಂಡಿದ್ದು, ರಸ್ತೆಗಳು ನದಿಗಳಂತಾಗಿವೆ. ತಗ್ಗು ಪ್ರದೇಶಗಳ ಮನೆಗಳಿಗೆ ನೀರು ನುಗ್ಗಿದ್ದು, ಮನೆಯಿಂದ ಹೊರ ಬರಲೂ ಸಾಧ್ಯವಾಗದೇ ಜಲದಿಗ್ಭಂಧನ ಪರಿಸ್ಥಿತಿ ಉಂಟಾಗಿದೆ. ಜನರು ಸಂಕಷ್ಟಕ್ಕೀಡಾಗಿದ್ದು, ನೀರು ಸರಾಗವಾಗಿ ಹರಿಯುವಂತೆ ವ್ಯವಸ್ಥೆ ಕಲ್ಪಿಸದ ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಳೆ ಅವಾಂತರದಿಂದ ಜನರು ಪರದಾಡುತ್ತಿರುವ ಬೆನ್ನಲ್ಲೇ ಎಚ್ಚೆತ್ತ ಬಿಬಿಎಂಪಿ ಇದೀಗ 10 ಸಾವಿರ ರೂಪಾಯಿ ಪರಿಹಾರ ಘೋಷಿಸಿದೆ. ಮನೆಗಳಿಗೆ ನೀರು ನುಗ್ಗಿ ಸಮಸ್ಯೆಯಾದ ಮನೆಗಳಿಗೆ ಹಾಗೂ ಮಳೆಯಿಂದ ತೊಂದರೆಗೀಡಾದ ಕುಟುಂಬಕ್ಕೆ 10,000 ರೂಪಾಯಿ ಪರಿಹಾರ ನೀಡುವುದಾಗಿ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.