ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ವರುಣ ಆರ್ಭಟಿಸುತ್ತಿದ್ದು, ಜನತೆ ತತ್ತರಿಸಿ ಹೋಗಿದ್ದಾರೆ. ಆಸ್ತಿಪಾಸ್ತಿ, ಬೆಳೆ ನಷ್ಟದ ಜೊತೆಗೆ ಜೀವ ಹಾನಿಯೂ ಸಂಭವಿಸಿದೆ. ಇದರ ಮಧ್ಯೆ ಮಳೆಯಿಂದಾಗಿರುವ ಹಾನಿ ಕುರಿತು ಅಧ್ಯಯನ ನಡೆಸಲು ಕೇಂದ್ರ ತಂಡ ನಾಳೆ ರಾಜ್ಯಕ್ಕೆ ಭೇಟಿ ನೀಡಲಿದೆ.
ಕೇಂದ್ರ ತಂಡ ಮೂರು ದಿನಗಳ ಕಾಲ ರಾಜ್ಯ ಪ್ರವಾಸ ನಡೆಸಲಿದ್ದು, ಕೇಂದ್ರ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ, ಆಶಿಶ್ ಕುಮಾರ್ ಇದರ ನೇತೃತ್ವ ವಹಿಸಲಿದ್ದಾರೆ. ಚಿತ್ರದುರ್ಗ, ಚಿಕ್ಕಮಗಳೂರು, ಗದಗ, ಹಾಸನ, ಬೀದರ್, ಹಾವೇರಿ, ಕಲಬುರಗಿ, ಯಾದಗಿರಿ ಹಾಗೂ ಧಾರವಾಡ ಜಿಲ್ಲೆಗಳಿಗೆ ಈ ತಂಡ ಭೇಟಿ ನೀಡಲಿದೆ.
ಈ ತಂಡ ಸ್ಥಳೀಯ ಜಿಲ್ಲಾಧಿಕಾರಿ ಮತ್ತು ಹಿರಿಯ ಅಧಿಕಾರಿಗಳಿಂದ ಅಗತ್ಯ ಮಾಹಿತಿ ಪಡೆದುಕೊಳ್ಳುವುದರ ಜೊತೆಗೆ ಖುದ್ದಾಗಿ ಪರಿಶೀಲನೆ ನಡೆಸಲಿದ್ದು, ಆ ಬಳಿಕ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಿದೆ. ವರದಿ ಸಲ್ಲಿಕೆಯಾದ ಬಳಿಕ ಕೇಂದ್ರ ಮಧ್ಯಾಂತರ ಪರಿಹಾರ ಬಿಡುಗಡೆ ಮಾಡುವ ಸಾಧ್ಯತೆ ಇದೆ.