ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ತಾರಕಕೇರಿದ್ದು, ಮಹಾರಾಷ್ಟ್ರದಲ್ಲಿ ಕೆಎಸ್ಆರ್ ಟಿಸಿ ಬಸ್ ಗಳ ಮೇಲೆ ಕಿಡಿಗೇಡಿಗಳಿಂದ ಕಲ್ಲುತೂರಾಟ ಪ್ರಕರಣ ಖಂಡಿಸಿ, ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ.
ಬೆಳಗಾವಿಯ ಬಳಿ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ ಕರವೇ ಕಾರ್ಯಕರ್ತರು, ಗೂಡ್ಸ್ ವಾಹನಗಳ ಮೇಲೆ ದಾಳಿ ನಡೆಸಿದ್ದಾರೆ. ಮಹಾರಾಷ್ಟ್ರ ವಾಹನಗಳ ಮೇಲೆ ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೂಡ್ಸ್ ಗಳ ಗಾಜು ಪುಡಿಗೈಯ್ಯಲು ಮುಂದಾದ ಕರವೇ ಕಾರ್ಯಕರ್ತರನ್ನು ಪೊಲೀಸರು ತಡೆಯಲು ಯತ್ನಿಸಿದ್ದು, ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲಿಸರ ನಡುವೆ ನೂಕಾಟ ತಳ್ಳಾಟ ನಡೆದಿದೆ.
ಇನ್ನೊಂದೆಡೆ ಬೆಳಗಾವಿಯಲ್ಲಿ ಕರವೇ ಮುಖ್ಯಸ್ಥ ನಾರಾಯಣಗೌಡ ಬಣದ ಕಾರ್ಯಕರ್ತರು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಎಸ್ಆರ್ಟಿಸಿ ಬಸ್ ಮೇಲೆ ಕತ್ತು ತೂರಾಟ ನಡೆಸಿದ ಪುಂಡರನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ. ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಹಲವು ಕರವೇ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.