ಬೆಂಗಳೂರು: ಮಾಜಿ ಶಿಕ್ಷಣ ಸಚಿವ, ಹಿರಿಯ ನಾಯಕ ಎಂ.ರಘುಪತಿ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ರಘುಪತಿಯವರನ್ನು ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಅವರ ಸ್ವಗೃಹದಲ್ಲಿ ಎಂ.ರಘುಪತಿ ಅವರ ಪಾರ್ಥಿವ ಶರೀರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಾಳೆ ಬೆಳಿಗ್ಗೆ ಅಂತ್ಯಕ್ರಿಯೆ ನಡೆಯಲಿದೆ. ಮಾಜಿ ಸಚಿವರ ಅಗಲಿಕೆಗೆ ರಾಜಕೀಯ ಮುಖಂಡರು ಸಂತಾಪ ಸೂಚಿಸಿದ್ದಾರೆ.
ಎಂ.ರಘುಪತಿ ಅವರು ಮಲ್ಲೇಶ್ವರಂ ಶಾಸಕರಾಗಿ ಸೇವೆ ಸಲ್ಲಿಸಿದ್ದರು. ರಾಮಕೃಷ್ಣ ಹೆಗಡೆ ಸಂಪುಟದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಕಾಂಗ್ರೆಸ್ ಕಾರ್ಯದರ್ಶಿಯಾಗಿ, ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದರು.