ಹಾವೇರಿ: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಘೋಷಣೆ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ವಿರುದ್ಧ ಗರಂ ಆಗಿರುವ ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಹೋರಾಟ ತೀವ್ರಗೊಳಿಸುವುದಾಗಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮೀಜಿ, ಸಿಎಂ ಬೊಮ್ಮಾಯಿ ಅವರು ಮಾತಿಗೆ ತಪ್ಪಿದ್ದಾರೆ. ತಾಯಿ ಮೇಲೆ ಪ್ರಮಾಣ ಮಾಡಿ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. 2ಸಿ, 2ಡಿ ಮೀಸಲಾತಿ ಎಂದು ಹೇಳುವ ಮೂಲಕ ನಮ್ಮ ಹೋರಾಟವನ್ನು ತಪ್ಪು ದಾರಿಗೆ ಎಳೆಯುವ ಕೆಲಸ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಿಎಂ ನಮ್ಮ ಸಮಾಜಕ್ಕೆ ಮಾಡಿದ ಅನ್ಯಾಯ ಖಂಡಿಸಿ ಇಂದು ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಹಾಕುತ್ತೇವೆ. ಇಂದಿನ ಪ್ರತಿಭಟನಾ ಸಭೆಯಲ್ಲಿ ನಮ್ಮ ಮುಂದಿನ ಹೋರಾಟದ ಬಗ್ಗೆ ನಿರ್ಣಯ ಕೈಗೊಳ್ಳುತ್ತೇವೆ ಎಂದು ಎಚ್ಚರಿಸಿದ್ದಾರೆ.