ದೇಶ ಹಾಗೂ ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಮತ್ತೆ ಹೆಚ್ಚಾಗತೊಡಗಿದ್ದು, ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧಾರಣೆ ಕಡ್ಡಾಯ ಮಾಡುವ ಕುರಿತು ಸರ್ಕಾರ ಚಿಂತನೆ ನಡೆಸುತ್ತಿದೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಾಸ್ಕ್ ಧರಿಸದವರಿಗೆ ದಂಡ ವಿಧಿಸುವ ಕುರಿತಂತೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.
ಆರೋಗ್ಯ ಸಚಿವ ಡಾ. ಸುಧಾಕರ್ ಈ ಕುರಿತು ಮಾಹಿತಿ ನೀಡಿದ್ದು, ಆಸ್ಪತ್ರೆಗೆ ದಾಖಲಾಗುವುದು ಕಡಿಮೆಯಾಗುತ್ತಿದ್ದಂತೆ ಸಾರ್ವಜನಿಕರು ಕೊರೊನಾ ನಿಯಮಗಳು ಕುರಿತು ತೀವ್ರ ನಿರ್ಲಕ್ಷ ತೋರಿಸುತ್ತಿದ್ದಾರೆ. ಆದರೆ ಇದು ಹೊಸ ಬಗೆಯ ವೈರಸ್ ಆಗಿರುವ ಕಾರಣ ತಜ್ಞರಿಗೂ ಇದರ ಪರಿಣಾಮಗಳನ್ನು ಇನ್ನೂ ಅರಿಯಲು ಸಾಧ್ಯವಾಗಿಲ್ಲ ಎಂದು ತಿಳಿಸಿದರು.
ಹೀಗಾಗಿ ಕೊರೊನಾ ಬಂದು ಹೋದ ನಂತರ ಅದರ ಪರಿಣಾಮಗಳನ್ನು ಎದುರಿಸುವುದಕ್ಕಿಂತ ಅದು ಬಾರದಂತೆ ತಡೆಗಟ್ಟುವುದು ಸೂಕ್ತ ಎಂದು ತಿಳಿಸಿದ ಸಚಿವರು, ಈ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ಬೆಂಗಳೂರಿನಲ್ಲಿ ಮಾಸ್ಕ್ ಧರಿಸದವರಿಗೆ ದಂಡ ವಿಧಿಸುವ ಕುರಿತು ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದರು.