ಈ ಹಿಂದೆ ವಿಧಿಸಲಾಗಿದ್ದ ಕೊರೊನಾ ಲಾಕ್ಡೌನ್ ಕಾರಣಕ್ಕೆ ವಿಶ್ವದ ಆರ್ಥಿಕ ಪರಿಸ್ಥಿತಿ ಸಂಪೂರ್ಣವಾಗಿ ಹದಗೆಟ್ಟಿದ್ದು, ಲಾಕ್ಡೌನ್ ತೆರವುಗೊಂಡ ಬಳಿಕ ಪರಿಸ್ಥಿತಿ ಸುಧಾರಿಸುತ್ತದೆ ಎಂದು ಸಮಾಧಾನಪಟ್ಟುಕೊಳ್ಳುತ್ತಿರುವುದರ ಮಧ್ಯೆ ಅಂತರಾಷ್ಟ್ರೀಯ ಹಣಕಾಸು ಸಂಸ್ಥೆ (IMF) ಎಚ್ಚರಿಕೆಯೊಂದನ್ನು ನೀಡಿದೆ. ಮುಂದಿನ ವರ್ಷ ಬಹುತೇಕ ದೇಶಗಳು ಆರ್ಥಿಕ ಹಿಂಜರಿತವನ್ನು ಕಾಣಲಿವೆ ಎಂದು ಐಎಂಎಫ್ ತಿಳಿಸಿದೆ.
ಅಮೆರಿಕದ ಬ್ಯಾಂಕುಗಳ ಸಾಲದ ಮೇಲಿನ ಬಡ್ಡಿ ನಿರಂತರವಾಗಿ ಹೆಚ್ಚಳವಾಗುತ್ತಿರುವುದು, ಉಕ್ರೇನ್ – ರಷ್ಯಾ ಯುದ್ಧ ಮುಂದುವರೆದಿರುವುದು ಹಾಗೂ ಆಯಾ ದೇಶಗಳಲ್ಲಿನ ಆಂತರಿಕ ಸಮಸ್ಯೆಯಿಂದ ಅಗತ್ಯ ವಸ್ತುಗಳ ಬೆಲೆ ಗಣನೀಯವಾಗಿ ಏರಿಕೆಯಾಗಿರುವುದು ಆರ್ಥಿಕ ಹಿಂಜರಿತಕ್ಕೆ ಕಾರಣವಾಗಲಿದೆ ಎಂದು ಅಂತರಾಷ್ಟ್ರೀಯ ಹಣಕಾಸು ಸಂಸ್ಥೆ ತಿಳಿಸಿದ್ದು, ಇದನ್ನು ಎದುರಿಸಲು ಜಗತ್ತು ಸನ್ನದ್ದವಾಗಬೇಕಿದೆ ಎಂದು ಹೇಳಿದೆ.
ಮುಂದಿನ ವರ್ಷ ಆರ್ಥಿಕ ಹಿಂಜರಿತ ಎದುರಾಗಲಿದೆ ಎಂಬ ಕಾರಣಕ್ಕಾಗಿಯೇ ಹಲವು ಕಂಪನಿಗಳು ಹೊಸ ಉದ್ಯೋಗಿಗಳ ನೇಮಕಕ್ಕೆ ಹಿಂದೇಟು ಹಾಕುತ್ತಿವೆ ಎನ್ನಲಾಗಿದ್ದು, ಇದರಿಂದ ನಿರುದ್ಯೋಗ ಸಮಸ್ಯೆ ಮತ್ತಷ್ಟು ಹೆಚ್ಚಳವಾಗಲಿದೆ ಎಂಬ ಭೀತಿ ಎದುರಾಗಿದೆ. ಇದರ ಜೊತೆಗೆ ಅಗತ್ಯ ವಸ್ತುಗಳ ಬೆಲೆ ಏರಿಕೆಯೂ ಆದರೆ ಜನಸಾಮಾನ್ಯರ ಪರಿಸ್ಥಿತಿ ಮತ್ತಷ್ಟು ಕಠಿಣವಾಗಲಿದೆ. ತೈಲಬೆಲೆಯೂ ಸಹ ಮುಗಿಲು ಮುಟ್ಟುವ ಸಾಧ್ಯತೆ ಇದೆ ಎಂದು ಆರ್ಥಿಕ ತಜ್ಞರು ಈಗಾಗಲೇ ಭವಿಷ್ಯ ನುಡಿದಿದ್ದಾರೆ.