ಬೆಂಗಳೂರು: ಕಿತ್ತೂರು ಉತ್ಸವವನ್ನು ರಾಜ್ಯ ಮಟ್ಟದ ಉತ್ಸವವಾಗಿ ಸರ್ಕಾರ ಘೋಷಿಸಿದ ಬೆನ್ನಲ್ಲೇ ಇದೀಗ ಮುಂಬೈ ಕರ್ನಾಟಕಕ್ಕೆ ಕಿತ್ತೂರು ಕರ್ನಾಟಕ ಎಂದು ನಾಮಕರಣ ಮಾಡಲು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಮ್ಮತಿ ಸೂಚಿಸಲಾಗಿದೆ.
ಬೆಳಗಾವಿ, ಉತ್ತರ ಕನ್ನಡ, ವಿಜಯಪುರ, ಗದಗ, ಧಾರವಾಡ ಸೇರಿದಂತೆ 7 ಜಿಲ್ಲೆಗಳಿಗೆ ಕಿತ್ತೂರು ಕರ್ನಾಟಕ ಎಂದು ನಾಮಕರಣ ಮಾಡಲು ಸಚಿವ ಸಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಜೆ.ಸಿ.ಮಾಧುಸ್ವಾಮಿ, ಕೋಲಾರ-ಚಿಕ್ಕಬಳ್ಳಾಪುರ ಹಾಲು ಉತ್ಪಾದಕರ ಸಂಘ ಹಾಗೂ ಧಾರವಾಡ-ಹಾವೇರಿ ಹಾಲು ಉತ್ಪಾದಕರ ಸಂಘಗಳನ್ನು ಪ್ರತ್ಯೇಕಿಸಲು ಸಂಪುಟದಲ್ಲಿ ಒಪ್ಪಿಗೆ ದೊರೆತಿದೆ ಎಂದರು.
ನೇಕಾರ ಸಮುದಾಯಕ್ಕೆ 376 ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ. ಹೊಸಪೇಟೆ-ಬಳ್ಳಾರಿ ರಸ್ತೆ ಕಾಮಗಾರಿಗೆ ಆಡಳಿತಾತ್ಮಕ ಒಪ್ಪಿಗೆ, ನೂತನ ಮರಳು ನೀತಿ ಜಾರಿಗೆ ಒಪ್ಪಿಗೆ.
ಮರಳು ಮಾರಾಟಕ್ಕೆ ಶೇ.25ರಷ್ಟು ಗ್ರಾಮ ಪಂಚಾಯಿತಿಗೆ ಅನುಮತಿ, ದಕ್ಷಿಣ ಕನ್ನಡದಲ್ಲಿ ಸಾಂಪ್ರದಾಯಿಕ ಮರಳು ತೆಗೆಯಲು ಅವಕಾಶ ನೀಡಲಾಗಿದೆ. ಜಮೀನು ಹಂಚಿಕೆ ನೀತಿಗೆ ಅನುಮತಿ ಸೇರಿದಂತೆ ಹಲವು ಮಹತ್ವದ ನಿರ್ಧಾರಗಳನ್ನು ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಇನ್ನು ಈ ಬಾರಿ ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ನಡೆಯಲಿದ್ದು, ಅಧಿವೇಶನದ ದಿನಾಂಕವನ್ನು ಮುಂದಿನ ಸಂಪುಟ ಸಭೆಯಲ್ಲಿ ತಿಳಿಸಲಾಗುವುದು ಎಂದು ಹೇಳಿದರು.