ಚಿತ್ರದುರ್ಗ: ಈಗಾಗಲೇ ಪೊಕ್ಸೋ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮುರುಘಾಶ್ರೀಗಳ ವಿರುದ್ಧ ಮತ್ತೊಂದು ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದ್ದು, ಮತ್ತೆ ನಾಲ್ವರು ಹೆಣ್ಣು ಮಕ್ಕಳ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮಠದ ಅಡುಗೆ ಸಹಾಯಕಿಯಾಗಿದ್ದ ಮಹಿಳೆ ಈ ನಿಟ್ಟಿನಲ್ಲಿ ದೂರು ದಾಖಲಿಸಿದ್ದಾರೆ.
ಮಠದಲ್ಲಿ ಅಡುಗೆ ಸಹಾಯಕಿಯಾಗಿದ್ದ ಮಹಿಳೆ ತನ್ನ ಇಬ್ಬರು ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ದೂರು ನೀಡಿದ್ದಾರೆ. ತನ್ನ ಮಕ್ಕಳನ್ನು ಮಹಿಳೆಯೇ ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆಗೆ ಕರೆದೊಯ್ದು ದೂರು ದಾಖಲಿಸಿದ್ದಾರೆ. ತನ್ನ ಇಬ್ಬರು ಹೆಣ್ಣು ಮಕ್ಕಳು ಹಾಗೂ ಇನ್ನಿಬ್ಬರು ಹೆಣ್ಣು ಮಕ್ಕಳು ಸೇರಿ ಒಟ್ಟು ನಾಲ್ವರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಎಫ್ ಐ ಆರ್ ದಾಖಲಿಸಿಕೊಂಡಿರುವ ಪೊಲೀಸರು ಬಳಿಕ ಪ್ರಕರಣವನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ವರ್ಗಾವಣೆ ಮಾಡಿದ್ದಾರೆ.