ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆಯ ಮೇಲಿನಪೇಟೆಯಲ್ಲಿ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಕಳೆದ ರಾತ್ರಿ ಬರ್ಬರವಾಗಿ ಹತ್ಯೆ ಮಾಡಿದ್ದು, ಇಂದು ಮರಣೋತ್ತರ ಪರೀಕ್ಷೆ ಬಳಿಕ ಅವರ ಪಾರ್ಥಿವ ಶರೀರವನ್ನು ಅಂತಿಮ ಸಂಸ್ಕಾರಕ್ಕಾಗಿ ಹುಟ್ಟೂರಿಗೆ ಮೆರವಣಿಗೆ ಮೂಲಕ ತೆಗೆದುಕೊಂಡು ಹೋಗಲಾಗುತ್ತಿದೆ.
ಪ್ರವೀಣ್ ಅವರ ಹುಟ್ಟೂರಾದ ನೆಟ್ಟಾರುವಿನಲ್ಲಿ ಅಂತಿಮ ಸಂಸ್ಕಾರ ನಡೆಯಲಿದ್ದು, ಅಲಂಕೃತ ಅಂಬುಲೆನ್ಸ್ ನಲ್ಲಿ ಮೃತದೇಹವನ್ನು ತೆಗೆದುಕೊಂಡು ಹೋಗಲಾಗುತ್ತಿದೆ. ಮೆರವಣಿಗೆಯಲ್ಲಿ ಹಿಂದೂ ಕಾರ್ಯಕರ್ತರು ಆಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದು, ಅಗಲಿದ ಬಿಜೆಪಿ ಮುಖಂಡ ಪ್ರವೀಣ್ ಅವರ ಭಾವಚಿತ್ರವನ್ನು ರಸ್ತೆಯುದ್ದಕ್ಕೂ ಹಾಕಲಾಗಿದೆ.
ಅತ್ತ ಪ್ರವೀಣ್ ನೆಟ್ಟಾರು ಅವರ ಮನೆಯಲ್ಲಿ ಶೋಕ ಮಡುಗಟ್ಟಿದ್ದು, ಕುಟುಂಬಸ್ಥರು, ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ. ಪ್ರವೀಣ್ ನೆಟ್ಟಾರು ಪಾರ್ಥಿವ ಶರೀರದ ಮೆರವಣಿಗೆ ಹುಟ್ಟೂರಿನತ್ತ ಸಾಗುತ್ತಿರುವ ಹಿನ್ನಲೆಯಲ್ಲಿ ಪೊಲೀಸರು ರಸ್ತೆಯುದ್ದಕ್ಕೂ ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.