
ಬೆಂಗಳೂರು: ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ನಾಯಕರು ನಡೆಸಿದ್ದ ಪಾದಯಾತ್ರೆ ಹೋರಾಟ ಒಂದು ಮಹಾ ನಾಟಕ ಎಂದು ಮಾಜಿ ಸಚಿವ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಆರ್. ಅಶೋಕ್, ಮೇಕೆದಾಟು ಯೋಜನೆಗೆ ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಮೇಕೆದಾಟು ಯೋಜನೆಗಾಗಿ ಹೋರಾಟ ನಡೆಸಿದ್ದ ಕಾಂಗ್ರೆಸ್ ನಾಯಕರು ಈಗ ಎಂ.ಕೆ. ಸ್ಟಾಲಿನ್ ಗೆ ಬೊಕೆ ನೀಡಿ ಸ್ವಾಗತಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹಿಂದೆ ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ನಾಯಕರು ಹೋರಾಟ ನಡೆಸಿದರು. ನೀರಿಗಾಗಿ ನಾವು ಹೋರಾಡುತ್ತಿದ್ದೇವೆ ಎಂದು ಬೊಗಳೆ ಬಿಟ್ಟರು. ನಮ್ಮ ಯೋಜನೆಗಾಗಿ ವಿರೋಧಿಸಿದ ಸ್ಟಾಲಿನ್ ಅವರನ್ನು ಈಗ ಕಾಂಗ್ರೆಸ್ ಸ್ವಾಗತಿಸಿದೆ. ಕಾಂಗ್ರೆಸ್ ನಾಯಕರಿಗೆ ನಾಚಿಕೆಯಾಗಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.