ಶಿವಮೊಗ್ಗ: ರಾಜಕೀಯ ಸ್ಥಾನಮಾನದ ಬಗ್ಗೆ ಯೋಚಿಸಲ್ಲ, ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆ ನನ್ನ ಗುರಿ ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಮೈಸೂರು ಭಾಗದಲ್ಲಿ ಪಕ್ಷ ಸಂಘಟಿಸುವ ಉದ್ದೇಶವಿದೆ. ವರಿಷ್ಠರ ಅಭಿಲಾಷೆಯಂತೆ ಆ ಭಾಗದಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡುತ್ತೇನೆ. ಪಕ್ಷ ಕೊಟ್ಟ ಜವಾಬ್ದಾರಿಯನ್ನು ನಿರ್ವಹಿಸುತ್ತೇನೆ. ಪೂರ್ಣ ಬಹುಮತದಲ್ಲಿ ಪಕ್ಷ ಅಧಿಕಾರಕ್ಕೆ ಬರಬೇಕು. ನಮ್ಮ ತಂದೆ ಬಿ.ಎಸ್.ಯಡಿಯೂರಪ್ಪ ಆಸೆಯೂ ಅದೇ ಆಗಿದೆ ಎಂದು ಹೇಳಿದರು.
ಇದೇ ವೇಳೆ ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ವಿಚಾರವಾಗಿ ಮಾತನಾಡಲು ನಿರಾಕರಿಸಿದ ವಿಜಯೇಂದ್ರ, ಶಾಸಕ ಯತ್ನಾಳ್ ಆರೋಪಕ್ಕೂ ಯಾವುದೇ ಪ್ರತಿಕ್ರಿಯೆ ನೀಡಲ್ಲ, ಅವರಿಗೆ ನನ್ನ ಮೇಲೆ ಪ್ರೀತಿ ಜಾಸ್ತಿ ಅದಕ್ಕೆ ಆ ರೀತಿ ಮಾತನಾಡುತ್ತಾರೆ ಎಂದು ಹೇಳಿದರು.