ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿಯಲ್ಲಿ ಯಡಿಯೂರಪ್ಪನವರ ನಂತರ ನಾನೇ ಹಿರಿಯ ಲಿಂಗಾಯಿತ ನಾಯಕನಾಗಿದ್ದೆ. ಹೀಗಾಗಿ ಮುಂದಿನ ದಿನಗಳಲ್ಲಿ ತಮ್ಮ ಸ್ಥಾನಮಾನಕ್ಕೆ ತೊಂದರೆ ಬರಬಹುದು ಎಂಬ ಕಾರಣಕ್ಕೆ ಕೆಲವರು ಷಡ್ಯಂತ್ರ ನಡೆಸಿ ನಾನು ಪಕ್ಷ ಬಿಟ್ಟು ಹೋಗುವಂತೆ ಮಾಡಿದ್ದಾರೆ ಎಂದು ಶೆಟ್ಟರ್ ಆರೋಪಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ಬಿಜೆಪಿಯಲ್ಲಿ ನನ್ನನ್ನು ಕಡೆಗಣನೆ ಮಾಡಿಕೊಂಡು ಬರಲಾಗಿದ್ದು, ಪದೇ ಪದೇ ಅವಮಾನ ಮಾಡಲಾಗುತ್ತಿತ್ತು. ಪಕ್ಷ ಕಟ್ಟಿ ಬೆಳೆಸಿದ್ದ ನನ್ನನ್ನು ನಿರ್ಲಕ್ಷ ಮಾಡುವ ಮೂಲಕ ಮೂಲೆಗುಂಪು ಮಾಡುವ ಪ್ರಯತ್ನ ನಡೆದಿತ್ತು ಎಂದು ಜಗದೀಶ್ ಶೆಟ್ಟರ್ ಹೇಳಿದರು.