ಶುಕ್ರವಾರದಂದು ಶಿಕಾರಿಪುರದಲ್ಲಿ ಮಾತನಾಡಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಚುನಾವಣಾ ರಾಜಕೀಯದಿಂದ ನಿವೃತ್ತಿಯನ್ನು ಘೋಷಿಸಿದ್ದು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಶಿಕಾರಿಪುರ ಕ್ಷೇತ್ರದಿಂದ ತಮ್ಮ ಕಿರಿಯ ಪುತ್ರ ಬಿ.ವೈ. ವಿಜಯೇಂದ್ರ ಕಣಕ್ಕಿಳಿಯಲಿದ್ದಾರೆ ಎಂದು ಘೋಷಿಸಿದ್ದರು.
ಯಡಿಯೂರಪ್ಪ ಅವರ ಈ ದಿಢೀರ್ ನಿರ್ಧಾರ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿತ್ತಲ್ಲದೆ ಹಲವು ಊಹಾಪೋಹಗಳಿಗೆ ಕಾರಣವಾಗಿತ್ತು. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ ಎಂಬ ಕಾರಣಕ್ಕೆ ಯಡಿಯೂರಪ್ಪ ಇಂಥದೊಂದು ತೀರ್ಮಾನಕ್ಕೆ ಬಂದಿದ್ದಾರೆ ಎಂದು ಭಾವಿಸಲಾಗಿತ್ತು.
ಇದೀಗ ಮತ್ತೊಬ್ಬ ನಾಯಕ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಹೇಳಿರುವುದಲ್ಲದೆ ತಾವು ಈವರೆಗೆ ಕಣಕ್ಕಿಳಿಯುತ್ತಿದ್ದ ಕ್ಷೇತ್ರವನ್ನು ಪುತ್ರನಿಗೆ ಬಿಟ್ಟುಕೊಡುತ್ತೇನೆ ಎಂದು ತಿಳಿಸಿದ್ದಾರೆ. ಹೌದು, ಕಾಂಗ್ರೆಸ್ ಮುಖಂಡ, ಮಾಜಿ ಸ್ಪೀಕರ್ ಕೆ.ಬಿ. ಕೋಳಿವಾಡ ರಾಣೆಬೆನ್ನೂರು ಕ್ಷೇತ್ರದಿಂದ ಪುತ್ರ ಪ್ರಕಾಶ ಕೋಳಿವಾಡ ಸ್ಪರ್ಧಿಸಲಿದ್ದಾರೆ ಎಂದು ತಿಳಿಸಿದ್ದು, ಈ ಕುರಿತು ಈಗಾಗಲೇ ಹೈಕಮಾಂಡ್ ಗೆ ಹೇಳಿದ್ದೇನೆ ಎಂದಿದ್ದಾರೆ.