ಮುಖ್ಯಮಂತ್ರಿ ಯಡಿಯೂರಪ್ಪನವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ತಮ್ಮ ಸರ್ಕಾರಕ್ಕೆ ಎರಡು ವರ್ಷ ತುಂಬಿದ ಹಿನ್ನಲೆಯಲ್ಲಿ ಯಡಿಯೂರಪ್ಪನವರು ವಿಧಾನಸೌಧದಲ್ಲಿ ಭಾಷಣ ಮಾಡಿದ ವೇಳೆ ಯಡಿಯೂರಪ್ಪ ರಾಜೀನಾಮೆ ನೀಡುವ ತೀರ್ಮಾನ ಪ್ರಕಟಿಸಿದ್ದಾರೆ. ಈ ವಿಷಯ ಹೇಳುವಾಗ ಯಡಿಯೂರಪ್ಪನವರು ಕಣ್ಣೀರಿಟ್ಟಿದ್ದಾರೆ.
ಯಡಿಯೂರಪ್ಪನವರು ವಿಧಾನಸೌಧದಿಂದ ರಾಜಭವನಕ್ಕೆ ಕಾಲ್ನಡಿಗೆಯಲ್ಲಿ ತೆರಳಿ ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಲಿದ್ದಾರೆ. ಯಡಿಯೂರಪ್ಪನವರು ರಾಜೀನಾಮೆ ಘೋಷಿಸುತ್ತಿದ್ದಂತೆಯೇ ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುರಿತು ಚರ್ಚೆ ಶುರುವಾಗಿದೆ. ನಾಳೆಯೇ ರಾಜ್ಯಕ್ಕೆ ಹೊಸ ಮುಖ್ಯಮಂತ್ರಿ ಅಭ್ಯರ್ಥಿ ಹೆಸರನ್ನು ಬಿಜೆಪಿ ಹೈಕಮಾಂಡ್ ಘೋಷಣೆ ಮಾಡಲಿದೆ.
ಮೂಲಗಳ ಪ್ರಕಾರ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರಿಗೆ ಮುಖ್ಯಮಂತ್ರಿ ಪಟ್ಟ ಒಲಿಯಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇವರೊಂದಿಗೆ ನಾಲ್ವರು ಉಪ ಮುಖ್ಯಮಂತ್ರಿಗಳನ್ನು ಆಯ್ಕೆ ಮಾಡಲಾಗುತ್ತದೆ ಎಂದು ಹೇಳಲಾಗುತ್ತಿದೆ.
ಸಚಿವ ಮುರುಗೇಶ್ ನಿರಾಣಿಯವರ ಹೆಸರೂ ಕೂಡಾ ಕೇಳಿ ಬರುತ್ತಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮುರುಗೇಶ್ ನಿರಾಣಿ ಆತ್ಮೀಯರಾಗಿರುವುದು ಹಾಗೂ ಉತ್ತರ ಕರ್ನಾಟಕದ ಪ್ರಭಾವಿ ನಾಯಕರಾಗಿರುವ ಅವರಿಗೆ ಮುಖ್ಯಮಂತ್ರಿ ಸ್ಥಾನ ದೊರೆಯಲಿದೆ ಎನ್ನಲಾಗುತ್ತಿದೆ.
ಹಾಗಯೇ ಶಾಸಕ ಅರವಿಂದ್ ಬೆಲ್ಲದ್ ಅವರ ಹೆಸರೂ ಕೇಳಿ ಬರುತ್ತಿದ್ದು, ಆದರೆ ಬಿಜೆಪಿ ಹೈಕಮಾಂಡ್ ಯಾರೂ ನಿರೀಕ್ಷಿಸದ ಮತ್ತೊಬ್ಬರನ್ನು ಮುಖ್ಯಮಂತ್ರಿಯಾಗಿ ಘೋಷಣೆ ಮಾಡಿದರೂ ಅಚ್ಚರಿಯಿಲ್ಲವೆನ್ನಲಾಗುತ್ತಿದೆ.