ಬೆಂಗಳೂರು: ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ನಡೆಸುತ್ತಿದ್ದ ಪ್ರತಿಭಟನೆ ತೀವ್ರಗೊಂಡಿದ್ದು, ಇದೀಗ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಸೇರಿದಂತೆ ನೂರಾರು ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೆಂಪು ಕೋಟೆ ಮೇಲೆ ಕೇಸರಿ ಧ್ವಜ ಹಾರಿಸುವುದಾಗಿ ಹೇಳಿಕೆ ನೀಡಿದ್ದ ಸಚಿವ ಈಶ್ವರಪ್ಪ ರಾಷ್ಟ್ರದ್ರೋಹವೆಸಗಿದ್ದಾರೆ ಎಂದು ಆರೋಪಿಸಿ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿ ಎದುರು ಮೊಹಮ್ಮದ್ ನಲಪಾಡ್ ನೇತೃತ್ವದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಸಚಿವ ಈಶ್ವರಪ್ಪ ಹುಚ್ಚ ಎಂದು ಘೋಷಣೆ ಕೂಗಿದ್ದಾರೆ. ಅಲ್ಲದೇ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ವೇಳೆ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಹಾಗೂ ಇತರ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ತಕ್ಷಣ ಎಚ್ಚೆತ್ತ ಪೊಲೀಸರು ಕಾರ್ಯಕರ್ತರನ್ನು ತಡೆದಿದ್ದಾರೆ. ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದಿದೆ. ಮೊಹಮ್ಮದ್ ನಲಪಾಡ್ ಹಾಗೂ ನೂರಾರು ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು ಬಸ್ ಹತ್ತಿಸಿ ಕರೆದೊಯ್ದಿದ್ದಾರೆ.