ಬೆಂಗಳೂರು: ನನ್ನ ವಿರುದ್ಧದ ನಕಲಿ ಜಾತಿ ಪ್ರಮಾಣ ಪತ್ರ ಆರೋಪ ಮಾಡಿದವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ.ರೇಣುಕಾಚಾರ್ಯ ಕಿಡಿಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ರೇಣುಕಾಚಾರ್ಯ, ನನ್ನ ಪುತ್ರಿ ಹೈಸ್ಕೂಲಿಗೆ ಹೋಗುವಾಗ ಜಾತಿ ಪ್ರಮಾಣ ಪತ್ರ ಕೊಟ್ಟು 40 ಲಕ್ಷ ಪಡೆದಿದ್ದೆ ಎಂದು ಕೆಲವರು ನನ್ನ ವಿರುದ್ಧ ಆರೋಪ ಮಾಡಿದ್ದಾರೆ. ಅಂತಹ ಆರೋಪ ಮಾಡಿದವರ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕುತ್ತೇನೆ. ಸುಳ್ಳು ಜಾತಿ ಪ್ರಮಾಣ ಪತ್ರ ಕೊಟ್ಟು ನಾನು ಯಾವುದೇ ರೀತಿ ಸರ್ಕಾರದ ಸೌಲಭ್ಯ ಪಡೆದಿಲ್ಲ. ರಾಜಕಾರಣಕ್ಕಾಗಿ ನನ್ನ ವಿರುದ್ಧ ಏನಾದ್ರೂ ಆರೋಪ ಮಾಡಲಿ ಆದರೆ ನನ್ನ ಮಗಳ ವಿರುದ್ಧ ಆರೋಪ ಮಾಡಿದರೆ ಸುಮ್ಮನಿರಲ್ಲ ಎಂದು ಗುಡುಗಿದರು.
ಇಂಥವರಿಗೆ ಸರಿಯಾದ ಉತ್ತರ ಕೊಡುತ್ತೇನೆ. ನಕಲಿ ಪ್ರಮಾಣ ಪತ್ರದ ಬಗ್ಗೆ ದಾಖಲೆ ಇದ್ದರೆ ಬಿಡುಗಡೆ ಮಾಡಲಿ. ಅದನ್ನು ಬಿಟ್ಟು ಸುಳ್ಳು ಆರೋಪ ಸರಿಯಲ್ಲ. ನನ್ನ ವಿರುದ್ಧದ ಆರೋಪದ ಬಗ್ಗೆ ಮುಖ್ಯಮಂತ್ರಿಗಳು, ಕಾನೂನು ಹಾಗೂ ಗೃಹ ಸಚಿವರು ಪರಿಶೀಲನೆ ಮಾಡಲಿ ಎಂದು ಹೇಳಿದರು.