ಬಳ್ಳಾರಿ: ಕಾಂಗ್ರೆಸ್ ಭಾರತ್ ಜೋಡೋ ಪಾದಯಾತ್ರೆ 1000 ಕೀ.ಮೀ ಕ್ರಮಿಸಿದ್ದು, ಗಣಿ ಜಿಲ್ಲೆ ಬಳ್ಳಾರಿಗೆ ಎಂಟ್ರಿ ಕೊಟ್ಟಿದೆ. ಮೀಸಲಾತಿ ಹೆಚ್ಚಳ ನಿರ್ಧಾರ ಕಾಂಗ್ರೆಸ್ ಸರ್ಕಾರದ್ದು ಎಂದು ಸಂಸದ ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬಳ್ಳಾರಿಯಲ್ಲಿ ಆಯೋಜಿಸಲಾಗಿರುವ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಎಸ್ ಸಿ, ಎಸ್ ಟಿ ಮೀಸಲಾತಿ ಹೆಚ್ಚಳ ನಿರ್ಧಾರ ಮಾಡಿದ್ದು ಕಾಂಗ್ರೆಸ್. ನ್ಯಾ.ನಾಗಮೋಹನ್ ದಾಸ್ ಸಮಿತಿ ರಚಿಸಿದ್ದು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷ ಆಗಿದೆ. ಮೀಸಲಾತಿ ಹೆಚ್ಚಳಕ್ಕೆ ಇಷ್ಟು ವರ್ಷ ವಿಳಂಬ ಮಾಡಿದ್ದು ಯಾಕೆ ಎಂದು ಪ್ರಶ್ನಿಸಿದ್ದಾರೆ.
ರಾಜ್ಯದಲ್ಲಿರುವುದು 40% ಕಮಿಷನ್ ಸರ್ಕಾರ. ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಪಿ ಎಸ್ ಐ ನೇಮಕಾತಿ ಸೇರಿದಂತೆ ಹಲವು ಹಗರಣಗಳು ನಡೆದಿವೆ. ಈ ಬಗ್ಗೆ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ನನ್ನ ಅಜ್ಜಿಗೆ ರಾಜಕೀಯ ಪುನರ್ಜನ್ಮ ನೀಡಿದ್ದು ಕರ್ನಾಟಕ. ಚಿಕ್ಕಮಗಳೂರು ಜನ ಇಂದಿರಾ ಗಾಂಧಿಯವರನ್ನು ಚುನಾವಣೆಯಲ್ಲಿ ಗೆಲ್ಲಿಸಿದ್ರು. ನಮ್ಮ ತಾಯಿ ಸೋನಿಯಾ ಗಾಂಧಿ ಅವರನ್ನು ಬಳ್ಳಾರಿ ಜನ ಗೆಲ್ಲಿಸಿದರು. ಕರ್ನಾಟಕ ಜನರ ಸಹಾಯವನ್ನು ನಾವು ಎಂದಿಗೂ ಮರೆಯಲ್ಲ ಎಂದು ರಾಜ್ಯದ ಜನರಿಗೆ ಧನ್ಯವಾದ ತಿಳಿಸಿದರು.