ಕಾರವಾರ: ರಾಜ್ಯದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಮಂಗಳೂರು, ಉಡುಪಿ ಜಿಲ್ಲೆಗಳು ಮಳೆ ಅವಾಂತರದಿಂದಾಗಿ ತತ್ತರಗೊಂಡಿವೆ.
ಕಳೆದ ಮೂರು ದಿನಗಳಿಂದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಚಿಕ್ಕಮಗಳೂರಿನಲ್ಲಿ ಮಳೆಯ ಅಬ್ಬರಕ್ಕೆ ಕಳಸ ಬಳಿಯ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದೆ. ಭದ್ರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಕೊಡಗು ಜಿಲ್ಲೆಯಲ್ಲಿ ಬಾಗಮಂಡಲ-ನಾಪೋಕ್ಲು ರಸ್ತೆ ಸಂಪೂರ್ಣ ಜಲಾವೃತಗೊಂಡಿದ್ದು, ಸಂಪರ್ಕ ಕಡಿತಗೊಂಡಿದೆ.
ಹಾವೇರಿಯಲ್ಲಿ ಸತತ ಮಳೆಯಿಂದಾಗಿ ರೈತರ ಜಮೀನು ಜಲಾವೃತಗೊಂಡಿದ್ದು, ಬೆಳೆಗಳು ನಾಶವಾಗಿವೆ. ದಾವಣಗೆರೆಯಲ್ಲಿ ಮಳೆಯಿಲ್ಲದೇ ಕಂಗಾಲಾಗಿದ್ದ ರೈತರು ಈಗಲಾದರೂ ಮಳೆ ಆರಂಭವಾಯಿತಲ್ಲ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇನ್ನೂ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.